ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ನಿಲ್ದಾಣ ಹೆಸರಿಡಲು ಮನವಿ

0
9

ಬೆಂಗಳೂರು: ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಉದ್ಘಾಟಿಸಿ ಮಾತನಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು “ಸೇಂಟ್ ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ಬೆಳೆದಿದೆ. ಆದ್ದರಿಂದ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತೀ ವರ್ಷ ತಪ್ಪದೆ ಹಾಜರಾಗುತ್ತೇನೆ. ಇಲ್ಲಿಗೆ ಬರುವುದು ನನಗೆ ಬಹಳ ಖುಷಿಯ ಸಂಗತಿ.
ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ.
ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ಕಾನೂನಿನ ಮೂಲಕ ತಕ್ಕ ಶಾಸ್ತಿ ಆಗಲಿದೆ. ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರೀಸ್ ನಿಲ್ದಾಣ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್ ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ ನೂರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದಿದ್ದಾರೆ.

Previous articleಮಾತು ಮುತ್ತು
Next articleಅಮೃತ ಸಮಾಚಾರ…