ಬಾಗಲಕೋಟೆ: ನಗರದ 50 ಹಾಸಿಗೆ ಆಸ್ಪತ್ರೆಯ ಆಪರೇಷನ್ ಥೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಆಸ್ಪತ್ರೆಯ ಒಳರೋಗಿಗಳ ವಿಭಾಗದಲ್ಲಿ ದಾಖಲಾದ 12 ಜನರನ್ನು ನವನಗರದ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಆಪರೇಷನ್ ಥೇಟರ್‌ನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಆಕ್ಸಿಜನ್ ಗ್ಯಾಸ್‌ಗಳನ್ನು ಕಟ್ಟಡದಿಂದ ಹೊರ ತಂದಿದ್ದಾರೆ. ಕೂಡಲೇ ಅಗ್ನಿಶಾಮಕ ದಳದ ವಾಹನ ಆಸ್ಪತ್ರೆಗೆ ದೌಡಾಯಿಸಿದೆ. ಹೊಗೆ ಹೊರತಾಗಿ ಬೆಂಕಿ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.
ಜಿಲ್ಲಾಧಿಕಾರಿ ಎಂ. ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಸಂದರ್ಭದಲ್ಲಿ ಅದೇ ತಾನೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿತ್ತು. ತತಕ್ಷಣ ರೋಗಿಗಳು ಸಹಿತ ಪೀಠೋಪಕರಣಗಳನ್ನು ಹೊರತರಲಾಗಿದೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.