ಬಾಗಲಕೋಟೆ (ಕುಳಗೇರಿ ಕ್ರಾಸ್): ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಕುಳಗೇರಿ ಕ್ರಾಸ್ನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಗ್ರಾಮದ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಿಗ್ಗೆ 10 ಗಂಟೆಗೆ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ರೈತರು, ಮೊದಲು ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಹೆದ್ದಾರಿಗೆ ಮುಳ್ಳು ಮತ್ತು ಕಂಟಿಗಳನ್ನು ಹಾಕಿ, ಬ್ಯಾರಿಕೇಡ್ಗಳನ್ನು ಅಡ್ಡವಿಟ್ಟು ರಸ್ತೆ ಸಂಚಾರ ತಡೆದು ಪ್ರತಿಭಟನೆ ಆರಂಭಿಸಿದರು. ಸರ್ಕಾರ ಕೂಡಲೇ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಂತರ ಮಾತನಾಡಿದ ರೈತರು, “17 ಷರತ್ತುಗಳನ್ನು ವಿಧಿಸಿ ಕೇವಲ 2,500 ರೂ. ಬೆಳೆ ಪರಿಹಾರ ನೀಡಲು ಮುಂದಾಗಿರುವ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸರ್ಕಾರ ನೀಡುವ ಪರಿಹಾರದ ಹಣದಲ್ಲಿ ಒಂದು ಚೀಲ ಗೊಬ್ಬರವನ್ನೂ ಖರೀದಿಸಲು ಸಾಧ್ಯವಿಲ್ಲ. ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗ್ಯಾರಂಟಿ ಯೋಜನೆಯ ಹಣಕ್ಕಿಂತ ರೈತರ ಶ್ರಮಕ್ಕೆ ಬೆಲೆ ಇಲ್ಲವೇ?” ಎಂದು ಪ್ರಶ್ನಿಸಿದರು.
“ಐದು ಲಕ್ಷ ರೈತರು ಒಟ್ಟಾಗಿ ನಿಮ್ಮ ಮನೆ ಬಾಗಿಲಿಗೆ ಬಂದರೂ ಉಡಾಫೆಯ ಉತ್ತರ ನೀಡಿ, ದೆಹಲಿಗೆ ಕರೆಸಿಕೊಂಡು ಕೇಂದ್ರ ಸರ್ಕಾರದ ಮುಂದೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ಮೋಸ ಮಾಡಿದ್ದೀರಿ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
“ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿಯೂ ಯಾವ ಸಂಸದರು, ಶಾಸಕರು ರೈತರ ಪರವಾಗಿ ಒಂದು ಮಾತನ್ನೂ ಆಡಲಿಲ್ಲ. ನಿಮ್ಮ ನಾಟಕ ನಮಗೆ ಅರ್ಥವಾಗಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಸರ್ಕಾರದವರು ಒಂದಾಗಿ ರೈತರನ್ನು ಮಣ್ಣುಪಾಲು ಮಾಡಲು ಹೊರಟಿದ್ದಾರೆ. 2028ರಲ್ಲಿ ನಿಮ್ಮನ್ನು ಮಣ್ಣುಪಾಲು ಮಾಡುತ್ತೇವೆ, ಎಚ್ಚರ!” ಎಂದು ರೈತರು ಗುಡುಗಿದರು.
ಮಾನವೀಯತೆ ಮೆರೆದ ರೈತರು: ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರೂ ರೋಗಿಗಳನ್ನು ಹೊತ್ತು ಸಾಗುತ್ತಿದ್ದ ಆಂಬುಲೆನ್ಸ್ಗಳಿಗೆ ರೈತರು ತಕ್ಷಣ ದಾರಿ ಮಾಡಿಕೊಟ್ಟರು. ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಶಾಲಾ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದರು.
ಪೊಲೀಸರ ಪ್ಲ್ಯಾನ್ಗೆ ರೈತರ ತಿರುಗೇಟು: ಬೆಳಿಗ್ಗೆ 10 ಗಂಟೆಯವರೆಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ಗಳು ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಂಡಿತು. ಮತ್ತೊಂದೆಡೆ, ಗ್ರಾಮೀಣ ಭಾಗದ ವಿವಿಧ ಹಳ್ಳಿಗಳಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯನ್ನು ನಿಯೋಜಿಸಿ, ಒಳರಸ್ತೆಗಳ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರು. ಇದನ್ನು ಗಮನಿಸಿದ ರೈತ ಮುಖಂಡರು, ತಕ್ಷಣವೇ ವಿವಿಧ ಹಳ್ಳಿಗಳ ರೈತರಿಗೆ ಫೋನ್ ಮೂಲಕ ಮಾಹಿತಿ ನೀಡಿದರು. ಬಳಿಕ ಗ್ರಾಮೀಣ ಭಾಗದ ಎಲ್ಲ ಸಂಪರ್ಕ ರಸ್ತೆಗಳನ್ನೂ ಬಂದ್ ಮಾಡಲಾಯಿತು. ಇದರಿಂದ ಒಳರಸ್ತೆಗಳಲ್ಲಿ ಸಿಲುಕಿಕೊಂಡ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು.
ಜೀವದ ಹಂಗು ತೊರೆದು ಹೋರಾಟ: ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. “ಜೀವದ ಹಂಗು ತೊರೆದು ಹೋರಾಟಕ್ಕೆ ಇಳಿದಿದ್ದೇವೆ. ಏನೇ ಬಂದರೂ ಎದುರಿಸಲು ಸಿದ್ಧರಿದ್ದೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ” ಎಂದು ಗುಡುಗಿದರು.
ಅಂಗಡಿ-ಮುಂಗಟ್ಟು ಬಂದ್ಗೆ ಮನವಿ: ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ವ್ಯಾಪಾರಸ್ಥರಲ್ಲಿ ರೈತರು ಮನವಿ ಮಾಡಿದರು. ಮದ್ಯದ ಅಂಗಡಿಗಳನ್ನೂ ಬಂದ್ ಮಾಡಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ತಾವು ಜವಾಬ್ದಾರರಲ್ಲ ಎಂದು ಎಚ್ಚರಿಸಿದರು.
ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು, ವ್ಯಾಪಾರಸ್ಥರು ಹಾಗೂ ಯುವಕರು ಹಸಿರು ಶಾಲು ಬೀಸುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಹೆದ್ದಾರಿಯಲ್ಲೇ ಅಡುಗೆ, ಊಟ: ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರು ತಾವೇ ಹಣ ಸಂಗ್ರಹಿಸಿ ಹೆದ್ದಾರಿಯಲ್ಲಿಯೇ ಅಡುಗೆ ಮಾಡಿ ಊಟ ಮಾಡಿದರು. “ಎಷ್ಟು ದಿನಗಳಾದರೂ ಸರಿ, ನಮ್ಮ ಬೇಡಿಕೆ ಈಡೇರುವವರೆಗೂ ಈ ಸ್ಥಳದಿಂದ ಕದಲುವುದಿಲ್ಲ” ಎಂದು ಪಟ್ಟು ಹಿಡಿದರು.
ಪೊಲೀಸರಿಂದ ಮುಂಜಾಗ್ರತಾ ಕ್ರಮ: ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗ್ರಾಮದ ಎರಡು ಕಿ.ಮೀ. ದೂರದಲ್ಲಿಯೇ ವಾಹನಗಳನ್ನು ತಡೆದು ನಿಲ್ಲಿಸಿದರು. ಸಂಚಾರ ದಟ್ಟಣೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಂಡರು.
ಸಂಜೆ ವೇಳೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟ ರೈತರು, “ಸರ್ಕಾರದ ಮುಂದಿನ ನಡೆ ಗಮನಿಸುತ್ತೇವೆ. ಬೇಡಿಕೆ ಈಡೇರದಿದ್ದರೆ ನಾಳೆಯೂ ಮತ್ತೆ ಹೆದ್ದಾರಿಗೆ ಇಳಿದು ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.





















