ಪೋಕ್ಸೋ ಪ್ರಕರಣ: ಗಾಯಕ ಮ್ಯೂಸಿಕ್ ಮೈಲಾರಿ ಬಂಧನ

0
6

ಬಾಗಲಕೋಟೆ: ಅಪ್ರಾಪ್ತ ಬಾಲಕಲಾವಿದೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಟ್ರೆಂಡಿಂಗ್ ಸ್ಟಾರ್’ ಎಂದೇ ಪರಿಚಿತನಾಗಿರುವ ಮ್ಯೂಸಿಕ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮೊದಲಿಗೆ ಪ್ರಕರಣ ದಾಖಲಾಗಿತ್ತು. 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ಆದರೆ ಆರೋಪಿತ ಕೃತ್ಯ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಲಾಡ್ಜ್ ಒಂದರಲ್ಲಿ ನಡೆದಿದೆ ಎಂಬ ಮಾಹಿತಿ ಬೆಳಕಿಗೆ ಬಂದ ಹಿನ್ನೆಲೆ, ಪ್ರಕರಣವನ್ನು ಬೆಳಗಾವಿಯಿಂದ ಬಾಗಲಕೋಟೆ ಜಿಲ್ಲೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ: ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್..!

ಪ್ರಕರಣ ವರ್ಗಾವಣೆಗೊಂಡ ತಕ್ಷಣವೇ ಬಾಗಲಕೋಟೆ ಜಿಲ್ಲಾ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಆರೋಪಿತನ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ತನಿಖೆಯ ಭಾಗವಾಗಿ, ವಿಜಯಪುರ ಜಿಲ್ಲೆಯ ತಿಕೋಟಾ ಸಮೀಪ ಮ್ಯೂಸಿಕ್ ಮೈಲಾರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಸದ್ಯದಲ್ಲೇ ಬನಹಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನ್ಯಾಯಾಲಯದ ಆದೇಶದ ಮೇರೆಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಲಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನೆಯ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ, ತಾಂತ್ರಿಕ ಸಾಕ್ಷ್ಯಗಳು ಹಾಗೂ ಇತರೆ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಲ್ಲಿ ಪಂದ್ಯ ಖಚಿತ

ಪೋಕ್ಸೋ ಕಾಯ್ದೆಯಡಿ ಅಪ್ರಾಪ್ತರ ಮೇಲೆ ನಡೆದ ಅಪರಾಧಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ತಪ್ಪಿತಸ್ಥರು ಕಂಡುಬಂದಲ್ಲಿ ಕಠಿಣ ಶಿಕ್ಷೆ ವಿಧಿಸುವ ಪ್ರಾವಧಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ತನಿಖೆಯ ನಂತರ ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Previous articleಮಹಾತ್ಮ ಗಾಂಧೀಜಿ ಹೆಸರನ್ನು ಅಳಿಸಿ ಗ್ರಾಮೀಣರ ಹಕ್ಕು ಕಸಿಯುವ VB-G RAM G ಬಿಲ್: ಸಚಿವ ಎಂ.ಬಿ. ಪಾಟೀಲ್ ಕಿಡಿ