ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ಗೊತ್ತುವಳಿಯನ್ನು ಮಹಾನಗರ ಪಾಲಿಕೆ ಸ್ವಯಂಪ್ರೇರಿತವಾಗಿ ಅಂಗೀಕರಿಸಬೇಕು. ಇಲ್ಲದಿದ್ದರೆ ಪಾಲಿಕೆಗೆ ಅಂತಿಮ ಎಚ್ಚರಿಕೆ ನೀಡಿ, ಅಗತ್ಯವಿದ್ದರೆ ಆಡಳಿತ ಮಂಡಳಿಯನ್ನು ಸೂಪರ್‌ಸೀಡ್ ಮಾಡುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಚಿವರೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಕನ್ನಡ ಸಂಘಟನೆಗಳು ಕರ್ನಾಟಕ ಪರ ಗೊತ್ತುವಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಕುರಿತು ಸರ್ಕಾರ ನೇರ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿದೆ ಎಂಬ ನೆಪದಲ್ಲಿ ಗೊತ್ತುವಳಿಯನ್ನು ತಡೆಹಿಡಿಯುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯ ವಿಚಾರಣೆಯೇ ಇನ್ನೂ ಆರಂಭವಾಗಿಲ್ಲ. ಆದ್ದರಿಂದ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು ಪಾಲಿಕೆ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.




















