ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, ರಾಜ್ಯದ ಆಡಳಿತ ಮತ್ತು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ ಅಧಿಕಾರಿಗಳ ವಿಶೇಷ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಬೆಳಗ್ಗೆಯೇ ವಿವಿಧ ಸ್ಥಳಗಳಲ್ಲಿ ಶೋಧ ಆರಂಭಿಸಿರುವುದಾಗಿ ಮೂಲಗಳು ತಿಳಿಸಿವೆ.
ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿರುವ ವೈ. ಮಂಜುನಾಥ್ ಅವರ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಲ್ಲಿ ಮಹತ್ವದ ದಾಖಲೆಗಳು, ಬ್ಯಾಂಕ್ ವ್ಯವಹಾರಗಳ ವಿವರಗಳು ಹಾಗೂ ಹಣಕಾಸು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿಯ ಸಮಯದಲ್ಲಿ ವೈ. ಮಂಜುನಾಥ್ ಅವರು ಇದೇ ಅಪಾರ್ಟ್‌ಮೆಂಟ್‌ನಲ್ಲಿ ಇದ್ದರು ಎಂದು ತಿಳಿದುಬಂದಿದೆ.
ಇದೇ ವೇಳೆ ಮೈಸೂರಿನಲ್ಲಿರುವ ಅವರ ಆಪ್ತ ಸ್ನೇಹಿತೆಯ ನಿವಾಸ, ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ಆಪ್ತನ ಮನೆ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಸ್ನೇಹಿತನ ನಿವಾಸದ ಮೇಲೂ ಇ.ಡಿ ಅಧಿಕಾರಿಗಳು ಸಮಗ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ವೈ. ಮಂಜುನಾಥ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದರಾಗಿದ್ದು, ಬಳ್ಳಾರಿ ಜಿಲ್ಲೆಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಾಳಿಗೆ ರಾಜಕೀಯ ಆಯಾಮವೂ ಸಿಕ್ಕಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಂಜುನಾಥ್ ಅವರು ಬೇನಾಮಿ ಹೆಸರಿನಲ್ಲಿ ಜಮೀನು, ಬಾರ್, ರೆಸ್ಟೋರೆಂಟ್ ಸೇರಿದಂತೆ ಹಲವು ಆಸ್ತಿಗಳನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇ.ಡಿ ಈ ಕಾರ್ಯಾಚರಣೆ ಕೈಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಕುರಿತು ಇ.ಡಿ ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ.
ದಾಳಿಯ ವೇಳೆ ಮಹತ್ವದ ದಾಖಲೆಗಳು, ಆಸ್ತಿ ವಿವರಗಳು, ಬ್ಯಾಂಕ್ ಖಾತೆಗಳ ಮಾಹಿತಿ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.
ಸದ್ಯ ಇ.ಡಿ ಅಧಿಕಾರಿಗಳ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಮತ್ತಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ನಿರೀಕ್ಷೆ ಇದೆ.






















