ಗೋಕಾಕ್: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಪುಣೆಯಿಂದ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಕಾರು ಹಾಗೂ ಯರಗಟ್ಟಿಯಿಂದ ಗೋಕಾಕ್ ಕಡೆಗೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಪುಣೆ ಮೂಲದ ಮಾಂಡ್ರೆ ಕುಟುಂಬದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ, ಮೃತರು ಹಾಗೂ ಗಾಯಗೊಂಡವರ ಸಂಪೂರ್ಣ ಹೆಸರು ಮತ್ತು ಇತರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.
ವಿಷಯ ತಿಳಿಯುತ್ತಿದ್ದಂತೆ ಗೋಕಾಕ್ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





















