ಬೆಳಗಾವಿ : ಭಾರೀ ಕುತೂಹಲ ಮೂಡಿಸಿದ್ದ ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ.
ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್ ನಿಂದ ಸ್ಫರ್ಧಿಸಿದ್ದ ಎಲ್ಲ 15 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ವಿರೋಧಿ ಪ್ಯಾನೆಲ್ ಗಳು ಧೂಳಿಪಟವಾಗಿವೆ.
ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರೈತರು ನಮ್ಮ ಮೇಲೆ ವಿಶ್ವಾಸವಿಟ್ಟು ಅಭೂತಪೂರ್ವ ಗೆಲುವು ನೀಡಿದ್ದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ ಎಲ್ಲ ಕಾರ್ಮಿಕರಿಗೂ ಸಹ ಕೃತಜ್ಞತೆ ಸಲ್ಲಿಸುತ್ತೇವೆ. ಅವರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದರು.
ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವುದು ಖಚಿತ. ಎಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.