ಬೆಳಗಾವಿ: ರಾಜ್ಯಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಹುಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರಿಗೆ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಸಿಐಡಿ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ಸಿಐಡಿ ಅಧಿಕಾರಿಗಳು ನೀಲಣ್ಣವರ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಪ್ರಕರಣದ ತನಿಖೆ ಇನ್ನೂ ಮುಂದುವರಿದಿರುವುದರಿಂದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ತನಿಖಾಧಿಕಾರಿಗಳು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಾಧೀಶ ಗಂಗಾಧರ್ ಕೆ. ಅವರು, ಶಿವಾನಂದ ನೀಲಣ್ಣವರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ಬಳಿಕ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.






















