1600 PSI ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ: ಡಾ.ಜಿ.ಪರಮೇಶ್ವರ್

0
1

ಬೆಳಗಾವಿ (ಸುವರ್ಣಸೌಧ): ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿಧಾನಸಭಾ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದಿನ ಸರ್ಕಾರದ ಅವಧಿಯಲ್ಲಿ 545 ಪಿಎಸ್‌ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದು ವಿವರಿಸಿದರು.

ಇದನ್ನೂ ಓದಿ: National Herald Case: ಸೋನಿಯಾಗಾಂಧಿ, ರಾಹುಲ್​ಗೆ ತಾತ್ಕಾಲಿಕ ರಿಲೀಫ್

ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಸಮಸ್ಯೆಗೆ ಪರಿಹಾರ ಕಂಡು 947 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಈಗ ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿಎಸ್‌ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಶಿವಮೊಗ್ಗ ಜಿಲ್ಲೆಯ ಪೊಲೀಸ್ ವ್ಯವಸ್ಥೆ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಮಂಜೂರಾದ ಹುದ್ದೆಗಳ ಪೈಕಿ 1394 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದಂತೆ 155 ಹುದ್ದೆಗಳು ಖಾಲಿ ಇದ್ದು, ಠಾಣೆಗಳ ದಿನನಿತ್ಯದ ಕಾರ್ಯಾಚರಣೆಗೆ ತೊಂದರೆಯಾಗದಂತೆ 103 ಗೃಹರಕ್ಷಕ ಸಿಬ್ಬಂದಿಗಳನ್ನು ನೇಮಿಸಿ ಕರ್ತವ್ಯಭಾರವನ್ನು ಸಮತೋಲನಗೊಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್..!

ಇನ್ನು ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪನೆ ಮಾಡುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸ್ಪೆಷಲ್ ಆಕ್ಷನ್ ಫೋರ್ಸ್ ಅನ್ನು ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಕೂಡ ಹೇಳಿದರು.

ರಾಜ್ಯದಲ್ಲಿ ಪೊಲೀಸ್ ಬಲವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮಗಳು ಮಹತ್ವದ ಹೆಜ್ಜೆಯಾಗಿದ್ದು, ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಸಾರ್ವಜನಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ವ್ಯಕ್ತವಾಗಿದೆ.

Previous articleIPL 2026 Auction: RCBಗೆ ಸೇರಿದ ವೆಂಕಟೇಶ್ ಅಯ್ಯರ್‌