ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕಪ್ಪು ಆಯಿಲ್ ಸುರಿದು ಕಿಡಿಗೇಡಿಗಳ ಕೃತ್ಯ : ಕನ್ನಡ ಸಂಘಟನೆಗಳ ಆಕ್ರೋಶ
ಬೆಳಗಾವಿ: ತಾಲೂಕಿನ ಮಚ್ಚೆ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಕಿಡಿಗೇಡಿಗಳು ಕಪ್ಪು ಬಣ್ಣದ ಆಯಿಲ್ ಸುರಿದು ಅವಮಾನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗವಾಗುತ್ತಿದ್ದಂತೆಯೇ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಪ್ರತಿಮೆಯ ಮೇಲೆ ಕಪ್ಪು ಬಣ್ಣ ಹಚ್ಚಿರುವುದನ್ನು ಗುರುತಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಸೇರಿದಂತೆ ಡಿಸಿಪಿ ನಾರಾಯಣ ಬರಮನಿ ಹಾಗೂ ಇನ್ನಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕೃತ್ಯಕ್ಕೆ ಕಾರಣವಾದವರನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ತಕ್ಷಣ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಘಟನೆಯ ಹಿನ್ನೆಲೆ ಮತ್ತು ಆರೋಪಿಗಳ ಗುರುತು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ತಕ್ಷಣವೇ ಪ್ರತಿಮೆಯನ್ನು ಸ್ವಚ್ಛಗೊಳಿಸುವ ಕಾರ್ಯ ಆರಂಭಿಸಿದ್ದು, ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಕನ್ನಡ ಪರ ಸಂಘಟನೆಗಳ ಆಕ್ರೋಶ: ಘಟನೆಗೆ ಸಂಬಂಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ತೀವ್ರ ಖಂಡನೆ ವ್ಯಕ್ತಪಡಿಸಿವೆ. “ರಾಯಣ್ಣ ಕೇವಲ ಇತಿಹಾಸದ ವ್ಯಕ್ತಿಯಲ್ಲ, ನಮ್ಮ ಅಸ್ತಿತ್ವದ ಸಂಕೇತ. ಅವರ ಪ್ರತಿಮೆಗೆ ಅವಮಾನ ಮಾಡುವ ಕೃತ್ಯವನ್ನು ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ,” ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಉದ್ವಿಗ್ನತೆ ನಿಯಂತ್ರಣಕ್ಕೆ ಪೊಲೀಸ್ ಕ್ರಮ: ಪ್ರದೇಶದಲ್ಲಿ ಶಾಂತಿ ಕಾಪಾಡಲು ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಸಮೀಕ್ಷೆ ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹರಡದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದು, ಶೀಘ್ರದಲ್ಲೇ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ.























