SK Home Ad
Home ನಮ್ಮ ಜಿಲ್ಲೆ ಬೆಳಗಾವಿ ಸಿದ್ದರಾಮಯ್ಯ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲ್ಲ: ಯತೀಂದ್ರ

ಸಿದ್ದರಾಮಯ್ಯ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲ್ಲ: ಯತೀಂದ್ರ

0
61

ಬೆಳಗಾವಿ ಅಭಿವೃದ್ಧಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಅಗೆದ ರಸ್ತೆಗಳನ್ನು ಗುತ್ತಿಗೆದಾರರೇ ದುರಸ್ತಿಗೊಳಿಸಬೇಕು: ಯತೀಂದ್ರ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಎಂದು ನೀಡಿರುವ ಹೇಳಿಕೆಯನ್ನು ಅವರ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದಾರೆ ಎಂಬ ಅರ್ಥದಲ್ಲಿ ವ್ಯಾಖ್ಯಾನಿಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತ್ರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ಯಾವುದೇ ಉದ್ದೇಶವನ್ನು ವ್ಯಕ್ತಪಡಿಸಿಲ್ಲ ಎಂದು ಹೇಳಿದರು.

“ಸಿದ್ದರಾಮಯ್ಯ ಅವರು ದುರ್ಬಲರು, ಶೋಷಿತರು ಮತ್ತು ಸಮಾಜದ ಹಿಂದುಳಿದ ವರ್ಗಗಳ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರ ರಾಜಕೀಯ ಹೋರಾಟ ಮುಂದುವರಿಯಲಿದೆ. ಮುಂದಿನ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯಾದ್ಯಂತ ಪ್ರಚಾರ ನಡೆಸುವುದು ಖಚಿತ” ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಂಪುಟ ವಿಸ್ತರಣೆ : ಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಅವರನ್ನು ದೆಹಲಿಗೆ ಕರೆದಿದ್ದು, ಅಲ್ಲಿನ ಚರ್ಚೆಯ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಕುರಿತ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಚರ್ಚಿಸಿ ಕೈಗೊಳ್ಳಲಿದ್ದಾರೆ. ಅದರ ನಂತರವೇ ಸಚಿವ ಸಂಪುಟ ವಿಸ್ತರಣೆಯ ಪ್ರಕ್ರಿಯೆ ನಡೆಯಲಿದೆ” ಎಂದು ಹೇಳಿದರು.

ಬೆಳಗಾವಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ : ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿರುವುದಾಗಿ ತಿಳಿಸಿದ ಸಚಿವರು, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಇಲಾಖೆಯ ವಿವಿಧ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆಗಳ ಪ್ರಗತಿಯನ್ನು ಪರಿಶೀಲಿಸುವುದಾಗಿ ಹೇಳಿದರು. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ಯೋಜನೆಗಳನ್ನು ಗುರುತಿಸಿ, ರಾಜ್ಯ ಸರ್ಕಾರದಿಂದ ಬೇಕಾದ ನೆರವು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ವಿಶೇಷ ಅನುದಾನದ ಕುರಿತು ಮಾಹಿತಿ ಪಡೆಯುತ್ತೇನೆ : ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ವಿಶೇಷ ಅನುದಾನ ಸ್ಥಗಿತಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವಿಷಯದ ಬಗ್ಗೆ ತನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಹೇಳಿದರು. “ಮೊದಲು ಈ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆಯುತ್ತೇನೆ. ಚುನಾಯಿತ ಪ್ರತಿನಿಧಿಗಳ ಆಡಳಿತ ಇಲ್ಲದ ಸ್ಥಳಗಳಿಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅನುದಾನ ದೊರೆಯುತ್ತದೆ. ಆದ್ದರಿಂದ ಈ ವಿಷಯವನ್ನು ಪರಿಶೀಲಿಸಿದ ಬಳಿಕವೇ ಸ್ಪಷ್ಟ ಮಾಹಿತಿ ನೀಡಬಹುದು” ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಸೂಚನೆ : ಸ್ಮಾರ್ಟ್ ಸಿಟಿ ಯೋಜನೆಯಡಿ ಎಲ್‌ ಆಂಡ್‌ ಟಿ ಕಂಪನಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, 24×7 ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಗಳನ್ನು ಅಗೆಲಾಗಿದೆ ಎಂದು ಹೇಳಿದರು. “ಯಾವ ಗುತ್ತಿಗೆದಾರರು ರಸ್ತೆಗಳನ್ನು ಅಗೆದಿದ್ದಾರೋ, ಅವರೇ ಅವುಗಳನ್ನು ಗುಣಮಟ್ಟದೊಂದಿಗೆ ಪುನಃ ದುರಸ್ತಿ ಮಾಡಬೇಕು. ಸಾರ್ವಜನಿಕರಿಗೆ ಅನಗತ್ಯ ತೊಂದರೆ ಆಗದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುತ್ತೇನೆ” ಎಂದು ತಿಳಿಸಿದರು.

ಜಿಲ್ಲೆಯ ಅಗತ್ಯಗಳಿಗೆ ಆದ್ಯತೆ : ಬೆಳಗಾವಿ ಜಿಲ್ಲೆಗೆ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮೂಲಸೌಕರ್ಯ ಯೋಜನೆಗಳನ್ನು ಅಧಿಕಾರಿಗಳ ಸಭೆಯಲ್ಲಿ ಪರಿಶೀಲಿಸಿ, ಸರ್ಕಾರದ ಮಟ್ಟದಲ್ಲಿ ಅಗತ್ಯ ನೆರವು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.