ಬಳ್ಳಾರಿ: ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಸಮೀಪ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸೇತುವೆ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮೃತರನ್ನು ಸಿರಗುಪ್ಪ ನಿವಾಸಿಗಳಾದ ಪ್ರಸಾದ್ ರಾವ್ (75), ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. ಅಪಘಾತದ ಹೊಡೆತ ತೀವ್ರವಾಗಿದ್ದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ರಬಕವಿ-ಬನಹಟ್ಡಿ ಪ್ರಾಧಿಕಾರ ಅಧ್ಯಕ್ಷ ದಿಢೀರ್ ಬದಲಾವಣೆ ಹುಲಜತ್ತಿ ಬದಲು ಸುರೇಶ ಪಾಟೀಲ ನೇಮಕ
ಅಪಘಾತವಾದ ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಸಿರಗುಪ್ಪದ ದೇವಿನಗರದ ಬಳಿ ಈ ಘಟನೆ ನಡೆದಿದ್ದು, ಮೃತರು ಮತ್ತು ಗಾಯಾಳುಗಳು ತಮಿಳುನಾಡಿನ ದೇವಸ್ಥಾನಕ್ಕೆ ದರ್ಶನಕ್ಕೆ ತೆರಳಿ ವಾಪಸ್ಸು ಬರುವಾಗ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ಸಮಯವಾಗಿದ್ದರಿಂದ ಚಾಲಕನಿಗೆ ನಿದ್ರಾವಸ್ಥೆ ಅಥವಾ ವಾಹನದ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಇದನ್ನೂ ಓದಿ: ಮಂಕಿ ಪಟ್ಟಣ ಪಂಚಾಯತ್ ಬಿಜೆಪಿ ಪಾಲು
ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಮೃತರ ಕುಟುಂಬದಲ್ಲಿ ಶೋಕದ ವಾತಾವರಣ ಮನೆಮಾಡಿದೆ.























