ಬೆಂಗಳೂರು: ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಕುರಿತು ಮಹತ್ವದ ಅಪ್‌ಡೇಟ್ ಸಿಕ್ಕಿದೆ. ರಾಜ್ಯ ಸರ್ಕಾರ ಕಗ್ಗಲೀಪುರ, ಹಾರೋಹಳ್ಳಿ ಅಥವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿರುವ ಚಿಕ್ಕ ಸೋಲೂರನ್ನು ವಿಮಾನ ನಿಲ್ದಾಣಕ್ಕಾಗಿ ಗುರುತಿಸಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಖಾತೆ ಸಚಿವ ಎಂ. ಬಿ. ಪಾಟೀಲ್ ಗುರುವಾರ ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಭೇಟಿಯಾಗಿದ್ದರು. ಆಗ 2ನೇ ವಿಮಾನ ನಿಲ್ದಾಣದ ಕುರಿತು ಮಾತುಕತೆ ನಡೆಸಿದ್ದಾರೆ.
ಸಚಿವರ ಪೋಸ್ಟ್: ಕೇಂದ್ರ ಸಚಿವರ ಭೇಟಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಎಂ.ಬಿ.ಪಾಟೀಲ್, ‘ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಈ ದಿನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ, ಮನವಿ ಸಲ್ಲಿಕೆಯ ಜೊತೆಗೆ ವಿಸ್ತೃತ ಮಾತುಕತೆ ನಡೆಸಿದೆ’ ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕಗ್ಗಲೀಪುರ, ಹಾರೋಹಳ್ಳಿ ಮತ್ತು ಚಿಕ್ಕ ಸೋಲೂರು ಸ್ಥಳವನ್ನು ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ಜೂನ್‌ನಲ್ಲಿಯೇ ವರದಿ ಸಲ್ಲಿಕೆ ಮಾಡಿದೆ. ಆದರೆ ಸ್ಥಳವನ್ನು ಇನ್ನೂ ಸಹ ಅಂತಿಮಗೊಳಿಸಿಲ್ಲ. ಆದ್ದರಿಂದ ಕೇಂದ್ರ ಸಚಿವರ ಜೊತೆ ಸ್ಥಳ ಅಖೈರು ಕುರಿತು ಎಂ. ಬಿ. ಪಾಟೀಲ್ ಮಾತುಕತೆ ನಡೆಸಿದ್ದಾರೆ.
ಉಳಿದಂತೆ ಸಚಿವರು ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಮೇಲ್ದರ್ಜೆಗೇರಿಸಿ ಎಂದು ಮನವಿ ಸಲ್ಲಿಸಿದ್ದಾರೆ. ಪ್ರಾದೇಶಿಕ ಮತ್ತು ಆರ್ಥಿಕ ಅಭಿವೃದ್ಧಿ, ಹಾಗೂ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸಿ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
2 ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಎ321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್ ಬೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ ಆಗುವಂತೆ ಕ್ರಮ ವಹಿಸಲಾಗಿದೆ ಎಂದು ಸಚಿವರು ವಿವರಣೆ ಕೊಟ್ಟಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣ: ಏರೋಸ್ಪೇಸ್ ಸಾಧನಗಳು, ಅಲ್ಯುಮಿನಿಯಂ ಸಾಧನಗಳು, ಹಣ್ಣು ಮತ್ತು ತರಕಾರಿಗಳನ್ನು ಸಾಗಿಸಲು ಪ್ರತ್ಯೇಕ ಟರ್ಮಿನಲ್ ಇದೆ. ಇದಲ್ಲದೆ ಬೆಳಗಾವಿಯಲ್ಲಿ 3 ವಿವಿಗಳು, 3 ಮೆಡಿಕಲ್ ಕಾಲೇಜುಗಳು, ಕೆಎಲ್ಇ ವಿವಿ ಎಲ್ಲವೂ ಇದ್ದು ವಿಶೇಷವಾಗಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ. ಇನ್ನೊಂದೆಡೆ, ರಕ್ಷಣಾ ವಲಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರಕಾರದ ಏರ್ಮೆನ್ ತರಬೇತಿ ಶಾಲೆ, ಕಮ್ಯಾಂಡೋ ತರಬೇತಿ ಕೇಂದ್ರ ಮತ್ತು ಐಟಿಬಿಪಿ ತರಬೇತಿ ಕೇಂದ್ರಗಳಿವೆ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.
ಅಲ್ಲದೇ ಸಚಿವರು ಮೈಸೂರು, ಶಿವಮೊಗ್ಗ, ಹಾಸನ, ಕಾರವಾರ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆಯೂ ಸುದೀರ್ಘವಾಗಿ ಚರ್ಚೆಯನ್ನು ನಡೆಸಿದ್ದಾರೆ.