ದೊಡ್ಡಬಳ್ಳಾಪುರ / ಬೆಂಗಳೂರು ಗ್ರಾಮಾಂತರ: 11 ವರ್ಷಗಳ ದೀರ್ಘ ವಿರಾಮದ ಬಳಿಕ ನಡೆದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಭಾರೀ ಸಿಹಿ ಸುದ್ದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಒಟ್ಟು 19 ವಾರ್ಡ್‌ಗಳ ಪೈಕಿ ಬಿಜೆಪಿ 14 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧನೆ ಮಾಡಿದೆ.
ಈ ಚುನಾವಣೆ ಹಲವು ಕಾರಣಗಳಿಂದ ವಿಶೇಷವಾಗಿತ್ತು. ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ನಂತರ ನಡೆದ ಮೊದಲ ಚುನಾವಣೆ ಇದಾಗಿದ್ದು, 11 ವರ್ಷಗಳ ಬಳಿಕ ಮತದಾನ ನಡೆದಿರುವುದು ಸ್ಥಳೀಯರಲ್ಲಿ ಅಪಾರ ಕುತೂಹಲ ಮೂಡಿಸಿತ್ತು. ಭಾನುವಾರ ನಡೆದ ಮತದಾನದಲ್ಲಿ ಒಟ್ಟು 64 ಅಭ್ಯರ್ಥಿಗಳು ಕಣದಲ್ಲಿದ್ದರು. ಮುಖ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬಂದಿದ್ದು, ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿಗಳೂ ಸ್ಪರ್ಧಿಸಿದ್ದರು.
ಇದನ್ನೂ ಓದಿ: ಮಂಕಿ ಪಟ್ಟಣ ಪಂಚಾಯತ್ ಬಿಜೆಪಿ ಪಾಲು
ಮತ ಎಣಿಕೆ ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಯಿತು. ಬೆಳಗ್ಗೆಯಿಂದಲೇ ಅಭ್ಯರ್ಥಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಎಣಿಕೆ ಕೇಂದ್ರದ ಬಳಿ ಸೇರಿ ಫಲಿತಾಂಶಕ್ಕಾಗಿ ಕಾದು ನಿಂತಿದ್ದರು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು.
ಚುನಾವಣಾ ಫಲಿತಾಂಶದ ಪ್ರಕಾರ, ಬಿಜೆಪಿ 14 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಗಳಿಸಿದೆ. ಕಾಂಗ್ರೆಸ್ ಕೇವಲ 3 ಸ್ಥಾನಗಳಿಗೆ ಸೀಮಿತವಾಗಿದ್ದು, ಜೆಡಿಎಸ್ ಒಂದು ಸ್ಥಾನ ಮತ್ತು ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶದೊಂದಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿ ಮೊದಲ ಬಾರಿಗೆ ಆಡಳಿತ ನಡೆಸಲಿದೆ.























