ದೆಹಲಿಯ ಹೃದಯಭಾಗದಲ್ಲಿರುವ ಕೆಂಪುಕೋಟೆಯ ಬಳಿ ಸಂಭವಿಸಿದ ಕಾರು ಸ್ಫೋಟದ ಘಟನೆಯು ದೇಶಾದ್ಯಂತ ಆತಂಕದ ವಾತಾವರಣ ಸೃಷ್ಟಿಸಿದ್ದು, ಅದರ ಬಿಸಿ ಈಗ ರಾಜ್ಯ ರಾಜಧಾನಿ ಬೆಂಗಳೂರಿಗೂ ತಟ್ಟಿದೆ.
ಈ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಭದ್ರತಾ ಕೋಟೆಯನ್ನು ನಿರ್ಮಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಭದ್ರತಾ ಸಿಬ್ಬಂದಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಹೆಚ್ಚುವರಿ ಶಸ್ತ್ರಸಜ್ಜಿತ ಸಿಐಎಸ್‌ಎಫ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಗಸ್ತು ತಿರುಗುವಿಕೆ ಹೆಚ್ಚಿಸಲಾಗಿದೆ.
ಏರ್‌ಪೋರ್ಟ್‌ಗೆ ಪ್ರವೇಶಿಸುವ ಮತ್ತು ನಿರ್ಗಮಿಸುವ ಪ್ರತಿಯೊಂದು ವಾಹನವನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಪ್ರಯಾಣಿಕರು ಹಾಗೂ ಅವರ ಲಗೇಜ್‌ಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಇನ್ನು, ನಗರದ ಜೀವನಾಡಿಯಂತಿರುವ ಮೆಜೆಸ್ಟಿಕ್ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಹಿಂದೆಂದಿಗಿಂತಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ಶ್ವಾನದಳಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ನಿರಂತರ ತಪಾಸಣೆ ನಡೆಸುತ್ತಿವೆ. ನಗರದ ಪ್ರಮುಖ ಮಾಲ್‌ಗಳು, ಮಾರುಕಟ್ಟೆಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿಯೂ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ.
ಈ ಆತಂಕಕಾರಿ ಬೆಳವಣಿಗೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
“ಈ ಘಟನೆಯನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು,” ಎಂದು ಅವರು ಮನವಿ ಮಾಡಿದ್ದಾರೆ.

























