ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಡಿಸೆಂಬರ್ 23ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಬೈರತಿ ಬಸವರಾಜ್ ಅವರಿಗೆ ದೊಡ್ಡ ಕಾನೂನು ಹಿನ್ನಡೆ ಉಂಟಾಗಿದ್ದು, ಸದ್ಯ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆ ಹೆಚ್ಚಾಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಹೆಸರು ಪ್ರಮುಖ ಆರೋಪಿಯಾಗಿ ಉಲ್ಲೇಖವಾಗಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ.
ಇದನ್ನೂ ಓದಿ: ವಿಜಯ್ ಹಜಾರೆ ನಾಳೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸ್ಥಳಾಂತರ
ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ವೇಳೆ ಬೈರತಿ ಬಸವರಾಜ್ ಪರ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದರು. ಶಾಸಕರ ವಿರುದ್ಧ ಪ್ರತ್ಯಕ್ಷ ಸಾಕ್ಷ್ಯಾಧಾರಗಳಿಲ್ಲ, ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂದು ಅವರು ಕೋರ್ಟ್ ಗಮನಕ್ಕೆ ತಂದರು. ಆದರೆ, ಸಿಐಡಿ ಪರ ವಿಶೇಷ ಸಾರ್ವಜನಿಕ ಅಭಿಯೋಜಕ (SPP) ಅಶೋಕ್ ನಾಯ್ಕ್ ಅವರು ಗಂಭೀರ ವಾದ ಮಂಡಿಸಿ, ಕೊಲೆ ಪ್ರಕರಣದಲ್ಲಿ ಶಾಸಕರ ಪಾತ್ರದ ಕುರಿತು ಸಾಕಷ್ಟು ಪ್ರಾಥಮಿಕ ಸಾಕ್ಷ್ಯಗಳು ಲಭ್ಯವಿದ್ದು, ಈ ಹಂತದಲ್ಲಿ ಜಾಮೀನು ನೀಡುವುದು ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪ್ರತಿಪಾದಿಸಿದರು.
ಎರಡೂ ಪಕ್ಸಗಳ ವಾದ ಆಲಿಸಿದ ನ್ಯಾಯಾಲಯ, ಪ್ರಕರಣದ ಗಂಭೀರತೆ, ಆರೋಪಿಯ ಪ್ರಭಾವ ಮತ್ತು ತನಿಖೆಯ ಹಂತವನ್ನು ಪರಿಗಣಿಸಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ಬೈರತಿ ಬಸವರಾಜ್ ವಿರುದ್ಧ ಸಿಐಡಿ ಬಂಧನಕ್ಕೆ ಮುಂದಾಗುವ ಸಾಧ್ಯತೆ ಹೆಚ್ಚಾಗಿದೆ.
ಇದನ್ನೂ ಓದಿ: ನಕಲಿ ದಾಖಲೆ ಸೃಷ್ಟಿಸಿ ಬಾಂಗ್ಲಾ ಪ್ರಜೆಗೆ ಪಾಸ್‌ಪೋರ್ಟ್: ಪೊಲೀಸ್ ಪೇದೆ ಸೆರೆ
ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳ ಸರಮಾಲೆ ಆರಂಭವಾಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.























