ಬೆಂಗಳೂರು: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ನೀಟ್’ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ಜೂನ್ 14 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ಕರೆ ನೀಡಿದ್ದಾರೆ.
ಸಿಜೆಪಿ ಮುಖ್ಯ ವಕ್ತಾರರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದಿಂದಾಗಿ ದೇಶದ ಸುಮಾರು ಒಂದು ಕೋಟಿ ವಿದ್ಯಾರ್ಥಿಗಳು ಇಂದು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾನಸಿಕ ನೊಂದ ಕೆಲವು ವಿದ್ಯಾರ್ಥಿಗಳು ಈಗಾಗಲೇ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಕ್ಕೆ ಶರಣಾಗಿದ್ದಾರೆ. ಈ ಎಲ್ಲಾ ಸಾವು ಹಾಗೂ ಗೊಂದಲಗಳಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ನೇರ ಹೊಣೆ ಹೊರಬೇಕು ಮತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕರವೇ ತೀವ್ರ ವಿರೋಧ: ಇದೇ ವೇಳೆ ಸಿಜೆಪಿ ಹಮ್ಮಿಕೊಂಡಿರುವ ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಹೋರಾಟಕ್ಕಾಗಿ ತಮಿಳುನಾಡಿನಿಂದ ಜನರನ್ನು ಕರೆತರುತ್ತಿರುವುದನ್ನು ಕರವೇ ಖಂಡಿಸಿದೆ. ಪ್ರತಿಭಟನೆ ಮಾಡುವುದಾದರೆ ಸ್ಥಳೀಯ ಕನ್ನಡಿಗರನ್ನು ಒಗ್ಗೂಡಿಸಿ ಹೋರಾಟ ನಡೆಸಲಿ ಎಂದು ಕರವೇ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.





















