ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಚೇರ್ಮನ್ ಹಾಗೂ ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಲ್ಯಾಂಗ್ ಫರ್ಡ್ ರಸ್ತೆಯಲ್ಲಿರುವ ತಮ್ಮ ನಿವಾಸದ ಬಂಗಲೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಅವರ ನಿವಾಸ ಹಾಗೂ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಸಿ.ಜೆ. ರಾಯ್ ಅವರು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಉದ್ಯಮಿ ಸಿ.ಜೆ. ರಾಯ್ ಅವರ ವಿರುದ್ಧ ತೆರಿಗೆ ವಂಚನೆ ಆರೋಪಗಳು ಕೇಳಿಬಂದಿದ್ದವು. ಇದೇ ಹಿನ್ನೆಲೆಯಲ್ಲಿ ಇಂದು ಕೂಡ ಐಟಿ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕೂಡ ಪದೇಪದೇ ಐಟಿ ದಾಳಿಗಳು ನಡೆದಿರುವುದು ವರದಿಯಾಗಿತ್ತು.
ಲಭ್ಯವಿರುವ ಮಾಹಿತಿಯಂತೆ, ಈ ದಾಳಿಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ. ಆದರೆ, ಮರಣದ ನಿಖರ ಕಾರಣ, ಸಂದರ್ಭಗಳು ಹಾಗೂ ದಾಳಿಯೊಂದಿಗಿನ ಸಂಬಂಧ ಕುರಿತು ಅಧಿಕೃತ ತನಿಖೆಯ ನಂತರವೇ ಸ್ಪಷ್ಟತೆ ಸಿಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯ ಕುರಿತು ಐಟಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳಿಂದ ಅಧಿಕೃತ ಹೇಳಿಕೆಗಳು ಇನ್ನೂ ಹೊರಬಿದ್ದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಮತ್ತು ತನಿಖೆಯ ಪ್ರಗತಿಯ ಆಧಾರದಲ್ಲಿ ಮುಂದಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.
ಸೂಚನೆ: ಮಾನಸಿಕ ಒತ್ತಡ ಅಥವಾ ಸಂಕಷ್ಟದಲ್ಲಿರುವವರು ಸಹಾಯ ಪಡೆಯುವುದು ಅತ್ಯಂತ ಅಗತ್ಯ. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ಅಗತ್ಯವಿದ್ದಲ್ಲಿ ಸ್ಥಳೀಯ ಸಹಾಯವಾಣಿ ಅಥವಾ ವಿಶ್ವಾಸಾರ್ಹ ವ್ಯಕ್ತಿಗಳ ನೆರವು ಪಡೆಯಲು ಮನವಿ. 24×7 ಸಹಾಯಕ್ಕಾಗಿ ಕಿರಣ್ ಮಾನಸಿಕ ಆರೋಗ್ಯ ಸಹಾಯವಾಣಿ – 1800-599-0019 ಅನ್ನು ಸಂಪರ್ಕಿಸಬಹುದು.





















