SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಲೋಕಭವನಕ್ಕೆ ಡಿ.ಕೆ.ಶಿವಕುಮಾರ್ ದಿಢೀರ್ ಭೇಟಿ: ಸಿಎಂ ಆಯ್ಕೆ ಕೌಂಟ್‌ಡೌನ್ ಆರಂಭ!

ಲೋಕಭವನಕ್ಕೆ ಡಿ.ಕೆ.ಶಿವಕುಮಾರ್ ದಿಢೀರ್ ಭೇಟಿ: ಸಿಎಂ ಆಯ್ಕೆ ಕೌಂಟ್‌ಡೌನ್ ಆರಂಭ!

0
257
File Photo

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ದಿನೆ ದಿನೇ ತೀವ್ರಗೊಳ್ಳುತ್ತಲೇ ಇದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಮಹತ್ವದ ಸಭೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಲೋಕಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್‌ರಿಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಡಿಕೆಶಿನೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮುನ್ಸೂಚನೆಗಳು ಬಲವಾಗಿವೆ.

ವರದಿಯ ಪ್ರಕಾರ, ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಿದ್ಧತೆಗಳ ಕುರಿತು ಚರ್ಚಿಸಲು ಡಿ.ಕೆ.ಶಿವಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇದು ಕೇವಲ ಅನೌಪಚಾರಿಕ ಭೇಟಿಯಾಗಿದ್ದರೂ, ಮುಂಬರುವ ಸರ್ಕಾರದ ರಚನೆಯ ಪ್ರಕ್ರಿಯೆಗಳಿಗೆ ಮುನ್ನುಡಿ ಬರೆದಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಭಾನುವಾರ ಉಪರಾಷ್ಟ್ರಪತಿಗಳು ಭಾಗವಹಿಸಲಿರುವ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಹೀಗಾಗಿ, ಪ್ರಮಾಣವಚನ ಸ್ವೀಕಾರ ಸಮಾರಂಭದ ದಿನಾಂಕ ನಿಗದಿಗೆ ಸಂಬಂಧಿಸಿದಂತೆ ಹಲವು ಸಾಧ್ಯತೆಗಳ ಬಗ್ಗೆ ಈ ಭೇಟಿಯಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಭಾನುವಾರ ಅಥವಾ ಸೋಮವಾರವೇ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಂದು ವೇಳೆ ರಾಜ್ಯಪಾಲರ ಪ್ರವಾಸದ ಹಿನ್ನೆಲೆಯಲ್ಲಿ ಇದು ಸಾಧ್ಯವಾಗದಿದ್ದರೆ, ಮುಂಬರುವ ಬುಧವಾರದಂದು ಅದ್ಧೂರಿಯಾಗಿ ಕಾರ್ಯಕ್ರಮವನ್ನು ಆಯೋಜಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಸಿಎಲ್‌ಪಿ ಸಭೆಯ ಅಧಿಕೃತ ನಿರ್ಧಾರದ ಬಳಿಕ ಈ ಗೊಂದಲಗಳಿಗೆ ತೆರೆ ಬೀಳಲಿದೆ.