ಬೆಂಗಳೂರು: ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತ್ಯೇಕ ‘ರೌಡಿ ನಿಗ್ರಹ ಪಡೆ’ ರಚಿಸಲು ನಿರ್ಧರಿಸಲಾಗಿದ್ದು, ರೌಡಿಗಳ ಚಟುವಟಿಕೆಗಳ ಮೇಲೆ ನೇರ ನಿಗಾ ಇರಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರೌಡಿಗಳ ಮೇಲಿನ ನಿಯಂತ್ರಣವನ್ನು ಸ್ಥಳೀಯ ಪೊಲೀಸ್ ಠಾಣೆಗಳಿಂದ ತೆಗೆದು ನೇರವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ನೀಡಲಾಗುತ್ತದೆ. ರೌಡಿಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಜವಾಬ್ದಾರಿಯನ್ನು ಪ್ರತ್ಯೇಕ ರೌಡಿ ನಿಗ್ರಹ ಪಡೆಗೆ ವಹಿಸಲಾಗುತ್ತದೆ ಎಂದು ತಿಳಿಸಿದರು.
ರೌಡಿಗಳು ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕ ಹೊಂದಿರುವ ವಿಚಾರವೂ ನಮ್ಮ ಗಮನದಲ್ಲಿದೆ. ಈ ರೀತಿಯ ಚಟುವಟಿಕೆಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ. ಭಯಮುಕ್ತ ಬೆಂಗಳೂರು ನಿರ್ಮಾಣ ಮಾಡುವುದು ನಮ್ಮ ಗುರಿಯಾಗಿದೆ. ನಗರದಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳೂ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಈ ಪಡೆ ರಚಿಸಲಾಗುತ್ತಿದೆ ಎಂದು ವಿವರಿಸಿದರು.
ಇದೇ ವೇಳೆ, ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೂ ಸರ್ಕಾರ ಬದ್ಧವಾಗಿದ್ದು, ಮಾದಕ ವಸ್ತುಗಳ ಜಾಲವನ್ನು ಪತ್ತೆಹಚ್ಚಲು ಪೊಲೀಸ್ ಅಧಿಕಾರಿಗಳು ದೊಡ್ಡ ಮಟ್ಟದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.





















