ಬೆಂಗಳೂರು: ರಾಜ್ಯ ಸರ್ಕಾರದ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ನಿವೃತ್ತ ಸರ್ಕಾರಿ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ನಗದು ರಹಿತ ಆರೋಗ್ಯ ಭಾಗ್ಯ ‘ಸಂಧ್ಯಾ ಕಿರಣ’ ಯೋಜನೆ ಜಾರಿಗೆ ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಆರೋಗ್ಯ ಭದ್ರತೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಾರ್ಷಿಕ ಗರಿಷ್ಠ ₹5 ಲಕ್ಷದವರೆಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ದೊರೆಯಲಿದೆ.
ಏನಿದು ‘ಸಂಧ್ಯಾ ಕಿರಣ’ ಯೋಜನೆ?: ಸರ್ಕಾರಿ ಸೇವೆಯಿಂದ ನಿವೃತ್ತರಾದ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಆರೋಗ್ಯ ಸಮಸ್ಯೆ ಎದುರಾದ ಸಂದರ್ಭದಲ್ಲಿ ಚಿಕಿತ್ಸಾ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಯೋಜನೆಯಡಿ ನಿಗದಿತ ಆಸ್ಪತ್ರೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ನಗದು ಪಾವತಿ ಮಾಡದೇ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ.
ನಿವೃತ್ತ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.
ನೌಕರರ ಸಂಘದ ಮನವಿಗೆ ಸ್ಪಂದನೆ: ನಿವೃತ್ತ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬಗಳಿಗೆ ನಗದು ರಹಿತ ಆರೋಗ್ಯ ಸೇವೆ ಕಲ್ಪಿಸುವಂತೆ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿಯನ್ನು ಪರಿಗಣಿಸಿರುವ ಸರ್ಕಾರ ಇದೀಗ ‘ಸಂಧ್ಯಾ ಕಿರಣ’ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಆದೇಶಿಸಿದೆ.
ಇದರಿಂದ ರಾಜ್ಯದ ಸಾವಿರಾರು ನಿವೃತ್ತ ಸರ್ಕಾರಿ ನೌಕರರು ಮತ್ತು ಕುಟುಂಬ ಪಿಂಚಣಿದಾರರಿಗೆ ಆರೋಗ್ಯ ಚಿಕಿತ್ಸೆಯಲ್ಲಿ ಹೆಚ್ಚಿನ ಅನುಕೂಲವಾಗಲಿದೆ.






















