ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಮಾಜಿ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳೆದ ಮೂವತ್ತು ವರ್ಷಗಳಲ್ಲಿ ಬ್ರಾಹ್ಮಣ ಸಮುದಾಯವನ್ನು ಸಚಿವ ಸಂಪುಟದಿಂದ ಹೊರಗಿಟ್ಟಿರುವುದು ಇದೇ ಮೊದಲು. ಪ್ರತಿಯೊಬ್ಬ ಮುಖ್ಯಮಂತ್ರಿಯೂ 2-3 ಬ್ರಾಹ್ಮಣ ಶಾಸಕರನ್ನು ಸಚಿವರನ್ನಾಗಿ ಮಾಡಿ ರಾಜ್ಯದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ತ್ರಿಮತಸ್ಥ ಬ್ರಾಹ್ಮಣ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುತ್ತಾ ಬಂದಿದ್ದಾರೆ. ಈ ಬಾರಿ ಆ ಶಿಷ್ಟಾಚಾರವನ್ನು ಮುರಿಯಬಾರದು ಎಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನಕ್ಕೆ ಅರ್ಹತೆ ಹೊಂದಿರುವ ಹಲವಾರು ಬ್ರಾಹ್ಮಣ ಶಾಸಕರಿದ್ದಾರೆ. ಬ್ರಾಹ್ಮಣರು ಅಧಿಕಾರ ಪಡೆದರೆ ಎಲ್ಲ ಸಮುದಾಯಗಳ ಹಿತಕ್ಕಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಹಾರನಹಳ್ಳಿ ಹೇಳಿದ್ದಾರೆ.
ಬ್ರಾಹ್ಮಣ ಸಮುದಾಯದಲ್ಲಿ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಅವರಂತಹ ಹಿರಿಯರು ಇದ್ದಾರೆ. ಅವರಲ್ಲಿ ಒಬ್ಬರನ್ನು ಸಚಿವ ಸಂಪುಟಕ್ಕೆ ಪರಿಗಣಿಸಬೇಕಾಗಿತ್ತು. ಸಚಿವ ಸಂಪುಟದಲ್ಲಿ ಒಬ್ಬ ಬ್ರಾಹ್ಮಣ ಶಾಸಕರಿಗೂ ಸಚಿವ ಸ್ಥಾನ ನೀಡದೆ ಇರುವುದು ಸರಿಯಲ್ಲ. ತಕ್ಷಣ ಈ ಲೋಪ ಸರಿಪಡಿಸಿ ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.




















