ಬೆಂಗಳೂರು: ದೇಶಾದ್ಯಂತ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಕಾರ್ಯಕರ್ತೆಯರ ಗೌರವಧನವನ್ನು ಮಾಸಿಕ ₹1,500 ಹೆಚ್ಚಿಸಲು ಕೇಂದ್ರ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದ್ದು, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರವಧನ ಹೆಚ್ಚಳದ ವಿಚಾರವಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ್ದೇನೆ. ಕಾರ್ಯಕರ್ತೆಯರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಮನವಿ ಮಾಡಿದ್ದೇನೆ ಎಂದರು.
ದೇಶದ ಎಲ್ಲ ರಾಜ್ಯಗಳಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಅನ್ವಯವಾಗುವಂತೆ ₹1,500 ಗೌರವಧನ ಹೆಚ್ಚಳಕ್ಕೆ ಪ್ರಸ್ತಾವ ಸಿದ್ಧಪಡಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಈ ಪ್ರಸ್ತಾವವನ್ನು ಮಂಡಿಸಿ, ಹೆಚ್ಚಳಕ್ಕೆ ಅನುಮೋದನೆ ನೀಡುವ ನಿರೀಕ್ಷೆಯಿದೆ ಎಂದರು.
ಕೇಂದ್ರ ಸರ್ಕಾರ ಗೌರವಧನ ಹೆಚ್ಚಳಕ್ಕೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ತನ್ನ ಪಾಲಿನ ಗೌರವಧನವನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಿ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.





















