Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಹೊಸಕೋಟೆ: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸಾವು

ಹೊಸಕೋಟೆ: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸಾವು

0
102

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಸಮೀಪದ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ನಡೆದಿದೆ.

ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್‌, ಬೈಕ್‌ ಹಾಗೂ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಓರ್ವ ಬೈಕ್ ಸವಾರ ಸೇರಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಕ್ಕೆ ಷರತ್ತು ಬದ್ಧ ಅನುಮತಿ

ಅಪಘಾತಕ್ಕೀಡಾದ XUV 700 ಕಾರು (ಸಂಖ್ಯೆ: KA-03 NW-0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿತ್ತು ಎಂದು ತಿಳಿದುಬಂದಿದೆ. ಈ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಸರಣಿ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರೊಳಗಿದ್ದವರು ಹೊರಬರಲಾರದ ಸ್ಥಿತಿಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸೇರಿ ರಕ್ಷಣಾ ಕಾರ್ಯ ನಡೆಸಿದರೂ, ಎಲ್ಲರೂ ಮೃತಪಟ್ಟಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಸಚಿವ ಸಂಪುಟ ನಿರ್ಣಯ

ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಂಬಂಧಿಕರ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

ಘಟನೆಯಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳ ಸಾಲು ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು. ಈ ಭೀಕರ ದುರ್ಘಟನೆ ಸಾರ್ವಜನಿಕರಲ್ಲಿ ತೀವ್ರ ನೋವು ಹಾಗೂ ಆತಂಕ ಮೂಡಿಸಿದ್ದು, ರಸ್ತೆ ಸುರಕ್ಷತೆಯ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

Previous articleT20 world cup: ಭಾರತಕ್ಕೆ 93 ರನ್‌ ಗೆಲುವು
Next articleಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಅನುದಾನಕ್ಕೆ ಆಗ್ರಹ