ಬೆಂಗಳೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಅನೇಕ ರಾಜಕೀಯ ಗಣ್ಯರು ಅವರಿಗೆ ಶುಭಾಶಯಗಳ ಮಹಾಪೂರ ಹರಿಸಿದ್ದಾರೆ. ಪ್ರಧಾನಿಯವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಹಾರೈಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ, “ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅವರ 75ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಹಾರೈಸುತ್ತೇನೆ” ಎಂದು ಹಂಚಿಕೊಂಡಿದ್ದಾರೆ.
ಬಿಜೆಪಿ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಮೋದಿ ಅವರಿಗೆ ಶುಭಕೋರಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಜನ್ಮದಿನದ ಶುಭಾಶಯಗಳು. ನಿಮ್ಮ ದೂರದೃಷ್ಟಿಯ ನಾಯಕತ್ವ ಮತ್ತು ದಣಿವರಿಯದ ಸೇವೆ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿದೆ. ನಮ್ಮ ರಾಷ್ಟ್ರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ನಿಮಗೆ ಉತ್ತಮ ಆರೋಗ್ಯ ಮತ್ತು ಶಕ್ತಿ ಸಿಗಲಿ ಎಂದು ಹಾರೈಸುತ್ತೇನೆ. ಜನ್ಮದಿನದ ಹಾರ್ದಿಕ ಶುಭಾಶಯಗಳು ಆದರಣೀಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ” ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕ ಆರ್. ಅಶೋಕ್ ಪ್ರಧಾನಿ ಮೋದಿಯವರನ್ನು “ದೇಶ ಕಂಡ ಅಪ್ರತಿಮ ನಾಯಕ, ಅಭಿವೃದ್ಧಿಯ ಹರಿಕಾರ, ಭಾರತವನ್ನು ವಿಶ್ವಗುರು ಮಾಡುವ ದಿಶೆಯಲ್ಲಿ ಮುನ್ನಡೆಸುತ್ತಿರುವ ದೂರದೃಷ್ಟಿಯುಳ್ಳ ನಾಯಕ” ಎಂದು ಬಣ್ಣಿಸಿದ್ದಾರೆ. “ನಮ್ಮ ನೆಚ್ಚಿನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದು ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರಾಜಕೀಯ ಗಣ್ಯರಲ್ಲದೆ, ಸಾರ್ವಜನಿಕರೂ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರುತ್ತಿದ್ದಾರೆ. ಈ ಶುಭಾಶಯಗಳ ನಡುವೆ, ಪ್ರಧಾನಿಯವರ ನಾಯಕತ್ವ ಮತ್ತು ದೇಶಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತಿದೆ.
ರಕ್ತದಾನ ಶಿಬಿರ: ಕಲಬುರಗಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಹೆಮ್ಮೆಯ ಪ್ರಧಾನಿಯ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೇವಾ ಸಪ್ತಾಹ ಹಾಗೂ ರಕ್ತದಾನ ಶಿಬಿರವನ್ನುಬಿ.ವೈ. ವಿಜಯೇಂದ್ರ ಉದ್ಘಾಟಿಸಿದರು. “ಅತ್ಯಮೂಲ್ಯ ಜೀವ ಉಳಿಸುವ ಶ್ರೇಷ್ಠ ರಕ್ತದಾನದ ಜಾಗೃತಿ ಮೂಡಿಸಿ, ವಿಶ್ವವೇ ನಿಬ್ಬರಗಾಗುವಂತೆ ದೇಶ ಮುನ್ನಡೆಸುತ್ತಾ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳುತ್ತಿರುವ ಕ್ರಿಯಾಶೀಲ ಸೇವೆ ಹೀಗೆಯೇ ನಿರಂತರ ಮುಂದುವರಿಯಲೆಂದು” ಹಾರೈಸಿದರು.