Pothole In Bengaluru: ಬೆಂಗಳೂರು ರಸ್ತೆಗುಂಡಿಗಳು, ಖಡಕ್ ಸೂಚನೆ ಕೊಟ್ಟ ಸಿಎಂ

0
38

Pothole In Bengaluru. ಸದ್ಯ ಬೆಂಗಳೂರು ನಗರದಲ್ಲಿ ಚರ್ಚೆಯಲ್ಲಿರುವ ವಿಚಾರ. ಬೆಂಗಳೂರು ನಗರದ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.

ಈ ಉನ್ನತ ಮಟ್ಟದ ಸಭೆಯಲ್ಲಿ ಸಚಿವರಾದ ಕೆ.ಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ಪಾಲಿಕೆಗಳ ಆಯುಕ್ತರು ಮತ್ತಿತರರು ಭಾಗವಹಿಸಿದ್ದರು.

ಸಭೆಯಲ್ಲಿ ನೀಡಿದ ಸೂಚನೆಗಳು

  • ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ. ಪ್ರತಿ ವಾರ್ಡ್‌ನ ಎಂಜಿನಿಯರ್‌ಗಳು, ಮುಖ್ಯ ಎಂಜಿನಿಯರ್‌ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.
  • ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.
  • ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ?, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ?, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.
  • ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮುಖ್ಯ ಆಯುಕ್ತರು ಪ್ರತಿ ವಾರ 5 ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.
  • ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ 1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.
  • ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.
  • ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌ 143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.
  • ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ. ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
  • ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು. ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್‌ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿಪಡಿಸಲು ಉದ್ದೇಶಿಸಲಾಗಿದೆ. ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
Previous articleಚಿಕ್ಕಮಗಳೂರು: ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ; ಮಹಿಳೆ ಬಂಧನ
Next articleಮೈಸೂರು: ದಸರಾ ಮಹೋತ್ಸವಕ್ಕೆ ಕ್ಷಣಗಣನೆ –  ಉದ್ಘಾಟನೆ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

LEAVE A REPLY

Please enter your comment!
Please enter your name here