ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಅಜ್ಜಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ಪರ ವಕೀಲರು ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿದ್ದು, ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅಗತ್ಯ ಅವಧಿಗೆ ಪೆರೋಲ್ ಮಂಜೂರು ಮಾಡುವಂತೆ ಕೋರಿದ್ದಾರೆ. ಆದರೆ, ಅರ್ಜಿಯಲ್ಲಿ ಎಷ್ಟು ಸಮಯದ ಪೆರೋಲ್ ಬೇಕೆಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ.
ಈ ಸಂಬಂಧದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ನ್ಯಾಯಾಲಯದ ಆದೇಶದ ನಿರೀಕ್ಷೆಯಿದೆ. ನ್ಯಾಯಾಲಯ ಪೆರೋಲ್ ಮಂಜೂರು ಮಾಡಿದಲ್ಲಿ, ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಭದ್ರತೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕರೆತರಲಾಗುವ ಸಾಧ್ಯತೆ ಇದೆ.
ಪ್ರಸ್ತುತ ಈ ಅರ್ಜಿಯ ವಿಚಾರಣೆಯತ್ತ ಎಲ್ಲರ ಗಮನ ನೆಟ್ಟಿದ್ದು, ಪೆರೋಲ್ ಕುರಿತು ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ಸೋಮವಾರ ಸ್ಪಷ್ಟವಾಗುವ ನಿರೀಕ್ಷೆಯಿದೆ.





















