Home ನಮ್ಮ ಜಿಲ್ಲೆ ಬೆಂಗಳೂರು ಆರ್‌ಎಸ್‌ಎಸ್ ಹಿರಿಯ ನಾಯಕ, ಮಾಜಿ ಪರಿಷತ್ ಸದಸ್ಯ ಪ್ರೊ. ಕೃ. ನರಹರಿ ನಿಧನ

ಆರ್‌ಎಸ್‌ಎಸ್ ಹಿರಿಯ ನಾಯಕ, ಮಾಜಿ ಪರಿಷತ್ ಸದಸ್ಯ ಪ್ರೊ. ಕೃ. ನರಹರಿ ನಿಧನ

0

ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪ್ರೊ. ಕೃ. ನರಹರಿ (93) ಅವರು ಬುಧವಾರ ಬೆಳಗಿನ ಜಾವ ವಿಧಿವಶರಾದರು. ಬೆಳಗ್ಗೆ 4.30ರ ಸುಮಾರಿಗೆ ವಯೋಸಹಜ ಅಸ್ವಸ್ಥತೆಯಿಂದ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು.

ಪ್ರೊ. ನರಹರಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ಮತ್ತು ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯದ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅವರ ಕೊಡುಗೆ ಗಣನೀಯವಾಗಿತ್ತು.

ತುರ್ತು ಪರಿಸ್ಥಿತಿ (Emergency) ಸಮಯದಲ್ಲಿ ಪ್ರೊ. ನರಹರಿ ಅವರು ಸರ್ಕಾರದ ವಿರುದ್ದ ಹೋರಾಟ ನಡೆಸಿ ಜೈಲು ವಾಸವನ್ನೂ ಅನುಭವಿಸಿದ್ದರು. ದೇಶಭಕ್ತಿ ಮತ್ತು ಸಾಂಸ್ಕೃತಿಕ ಮೌಲ್ಯಗಳ ಬೆಳೆಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು.

ಅವರ ನಿಧನದ ಹಿನ್ನೆಲೆಯಲ್ಲಿ ಸಂಘದ ಹಿರಿಯ ನಾಯಕರು ಮತ್ತು ಬಿಜೆಪಿ ಮುಖಂಡರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವರು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಪಾರ್ಥಿವ ಶರೀರವನ್ನು ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಮಧ್ಯಾಹ್ನ 2.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 3.00 ಗಂಟೆಗೆ ಹರಿಶ್ಚಂದ್ರ ಘಾಟ್ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version