ಬೆಂಗಳೂರು: ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯ ರಿಜಿಸ್ಟ್ರಾರ್ ಡಾ. ಮಲ್ಲು ಎಂಬವರನ್ನು ನಗರದ ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಾಂಧಿನಗರದಲ್ಲಿರುವ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಡಾ.ಮಲ್ಲು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾರ್ಚ್ 26ರಂದು ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದರು.
ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ನೀಡಿದರೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಡಾ. ಮಲ್ಲ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.






















