ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ಕಾಂಗ್ರೆಸ್ ಪಕ್ಷದ ಮೇಲೆ ಹಾಗೂ ಕರ್ನಾಟಕದ ಚುನಾವಣಾ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹವಾಗಿದ್ದು, ಹಿಂದುಳಿದ ವರ್ಗ ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹ ಮಾಡಿದಂತಾಗಿದೆ. ವಿಶೇಷವಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಒಬಿಸಿ ಪರವಾಗಿ ಪ್ರಚಾರ ಮಾಡುತ್ತಾರೆ. ಆದರೆ, ಒಬಿಸಿ ಮುಖ್ಯಮಂತ್ರಿಯನ್ನು ಕಿತ್ತು ಹಾಕಿದ್ದಾರೆ. ಹಿಂದುಳಿದ ವರ್ಗಗಳ ಬಗ್ಗೆ ಅವರು ಮೊಸಳೆ ಕಣ್ಣೀರು ಸುರಿಸುವುದು ಈಗ ಬಹಿರಂಗವಾಗಿದೆ. ಇದರಿಂದ ಹಿಂದುಳಿದ ವರ್ಗದವರು ಬೇಸರಗೊಂಡಿದ್ದು, ಅವರು 2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದಾಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಡಳಿತ ಪಕ್ಷವನ್ನು ಅಶಕ್ತಗೊಳಿಸಿದ್ದು, ಬಿಜೆಪಿ ಇನ್ನಷ್ಟು ಬಲಿಷ್ಠವಾಗಿ ನಮ್ಮದೇ ಆದ ಶಕ್ತಿಯೊಂದಿಗೆ 2028ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.
ಪಕ್ಷ ಸಂಘಟನೆಗೆ ಸೂಚನೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯಕ್ಕೆ ಭೇಟಿ ನೀಡಿದಾಗ ರಾಜ್ಯ ನಾಯಕರಿಗೆ ನೀಡಿರುವ ಸೂಚನೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಅಧ್ಯಕ್ಷರು ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಸಂಘಟಿಸಲು ಸೂಚಿಸಿದ್ದಾರೆ. ಅಲ್ಲದೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಕ್ಷದ ಬಿಎಲ್‌ಎ ಮತ್ತು ಬಿಎಲ್‌ಎ 2 ಹೇಗೆ ಕೆಲಸ ನಿರ್ವಹಿಸಬೇಕೆನ್ನುವುದನ್ನು ಗಂಭೀರವಾಗಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಅವರು ಕರ್ನಾಟಕಕ್ಕೆ ಮೇಲಿಂದ ಮೇಲೆ ಭೇಟಿ ನೀಡಲಿದ್ದು, 2028ಕ್ಕೆ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಅವರ ಗುರಿಯಾಗಿದೆ ಎಂದು ಹೇಳಿದ್ದಾರೆ.





















