SK Home Ad
Home ನಮ್ಮ ಜಿಲ್ಲೆ ಬೆಂಗಳೂರು ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ: ಸಿಎಂ

ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ: ಸಿಎಂ

0
81

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ನಡೆದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಹಿತಾಸಕ್ತಿಯೇ ಎಲ್ಲಕ್ಕಿಂತ ಮುಖ್ಯವಾಗಿದ್ದು, ಈ ವಿಚಾರದಲ್ಲಿ ರಾಜಕೀಯವನ್ನು ಬದಿಗಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕೆಂದು ಕರೆ ನೀಡಿದರು.

ಸಭೆಯ ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, “ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಕಾವೇರಿ ವಿವಾದವನ್ನು ನಾವೆಲ್ಲ ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ” ಎಂದು ಹೇಳಿ, ಈ ಸಮಸ್ಯೆ ಹಲವು ದಶಕಗಳಿಂದ ರಾಜ್ಯ ಎದುರಿಸುತ್ತಿರುವ ಗಂಭೀರ ವಿಚಾರ ಎಂದು ನೆನಪಿಸಿದರು.

ರಾಜಕೀಯಕ್ಕಿಂತ ರಾಜ್ಯದ ರೈತರ ಹಾಗೂ ಜನರ ಹಿತವೇ ಮುಖ್ಯವಾಗಿದ್ದು, ರಾಜ್ಯದ ಹಿತಾಸಕ್ತಿ ವಿಷಯ ಬಂದಾಗ ಎಲ್ಲಾ ರಾಜಕೀಯ ಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದಾಗಿ ನಿಂತಿರುವ ಉತ್ತಮ ಸಂಪ್ರದಾಯ ಕರ್ನಾಟಕದಲ್ಲಿದೆ ಎಂದು ಅವರು ಹೇಳಿದರು.

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂಬುದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವಾಗಿದ್ದು, ಈ ನಿಲುವಿಗೆ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿರುವ ಎಲ್ಲ ನಾಯಕರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳಿಗೂ ಮುನ್ನ ತಾವು ಕೇಂದ್ರ ಸಚಿವರಾದ ಸಿ.ಆರ್. ಪಾಟೀಲ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾಗಿ ತಿಳಿಸಿದರು.

ರಾಜ್ಯದ ಪರವಾಗಿ ಕೇಂದ್ರದ ಮಟ್ಟದಲ್ಲಿಯೂ ಅವರು ಸಮರ್ಥವಾಗಿ ಧ್ವನಿ ಎತ್ತಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಧನ್ಯವಾದ ಅರ್ಪಿಸಿದರು. ಇದೇ ವೇಳೆ, ದೆಹಲಿಯಲ್ಲಿ ನಡೆದ ಕರ್ನಾಟಕದ ಸಂಸತ್ ಸದಸ್ಯರ ಸಭೆಯಲ್ಲಿಯೂ ಪಕ್ಷಬೇಧ ಮರೆತು ರಾಜ್ಯದ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ನಿಲ್ಲುವುದಾಗಿ ಭರವಸೆ ನೀಡಿರುವುದಕ್ಕೆ ಸಂಸದರಿಗೂ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು.

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ಹಕ್ಕು ಹಾಗೂ ಜನರ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಎಲ್ಲಾ ರಾಜಕೀಯ ಪಕ್ಷಗಳ ಸಹಕಾರದೊಂದಿಗೆ ಮುಂದಿನ ಹೋರಾಟವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.