ಬೀದರ್: ಅನುಮಾನಾಸ್ಪದ ವಸ್ತುವೊಂದು ಏಕಾಏಕಿ ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಇಂದು ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲೇ ಆರು ಮಕ್ಕಳು ಹಾಗೂ ಇಬ್ಬರು ಯುವಕರು ನಿಂತಿದ್ದರು ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಯಿಂದ ಗಾಯಾಳುಗಳ ಮುಖ, ಮೈ ಮತ್ತು ಕೈ ಭಾಗಗಳಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ. ಗಾಯಗೊಂಡ ಎಲ್ಲರನ್ನು ತಕ್ಷಣವೇ ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಇದನ್ನೂ ಓದಿ: ತುಮಕೂರು ಪಿಎಸ್‌ಐ ಲೋಕಾಯುಕ್ತರ ಬಲೆಗೆ
ಗಾಯಗೊಂಡವರಲ್ಲಿ ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಹೈದರಾಬಾದ್‌ಗೆ ರವಾನಿಸಲಾಗಿದೆ. ಮತ್ತೊಬ್ಬ ಗಾಯಾಳು ಜಬ್ಬಾರ್ ಸಾಬ್ (65) ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋಲ್ಲಾಪೂರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗಾಯಾಳುಗಳ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಶಾಲಾ ಮಕ್ಕಳಿಗೆ ಸಂಭವಿಸಿದ ಅಪಘಾತದಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ರಾಜ್ಯ ಸಾರಿಗೆ ಬಸ್, ನಿಲ್ದಾಣಗಳಲ್ಲಿ ತಂಬಾಕು ಜಾಹೀರಾತು ಸಂಪೂರ್ಣ ನಿಷೇಧ
ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಗೊಂಡ ವಸ್ತು ಹಳೆಯ ಸ್ಫೋಟಕವಾಗಿರಬಹುದೇ ಅಥವಾ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಕಡ್ಡಿಗಳು (ಡೈನಮೈಟ್) ಸ್ಫೋಟಗೊಂಡಿವೆಯೇ ಎಂಬ ಅನುಮಾನ ವ್ಯಕ್ತವಾಗಿದೆ.
ಗಮನಾರ್ಹವೆಂದರೆ, ಇದೇ ಪ್ರದೇಶದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಇಂತಹ ಸ್ಫೋಟ ಸಂಭವಿಸಿರುವುದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಅಕ್ರಮವಾಗಿ ಸಂಗ್ರಹಿಸಲಾದ ಸ್ಫೋಟಕ ವಸ್ತುಗಳೇ ಇದಕ್ಕೆ ಕಾರಣವಾಗಿವೆಯೇ ಎಂಬ ಕೋನದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಲಂಚಕೋರ ಇನ್‌ಸ್ಪೆಕ್ಟರ್‌ನ ಹೈಡ್ರಾಮಾ ವೈರಲ್!
ಸಮಗ್ರ ತನಿಖೆಗೆ ಆದೇಶ: ಈ ಕುರಿತಂತೆ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನನಗೆ ಅತ್ಯಂತ ಆಘಾತ ಉಂಟುಮಾಡಿದೆ.
ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವಂತೆ ಸೂಚನೆ ನೀಡಿದ್ದೇನೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಫೋಟಕ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ, ಸ್ಫೋಟ ಸ್ಥಳದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ.
ಸ್ಫೋಟಕ್ಕೆ ಕಾರಣವೇನು? ಬಳಸಿದ ವಸ್ತು ಯಾವುದು? ಅದು ಅಲ್ಲಿ ಹೇಗೆ ಬಂದಿತು? ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು? ಎಂಬ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾರಣರಾದವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ,























