ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ-ವಡೆಯ್ಯನಪುರ ವ್ಯಾಪ್ತಿಯ ಜಮೀನು, ಹಳ್ಳಕೊಳ್ಳದಲ್ಲಿ ಗುಂಡ್ಲುಪೇಟೆ ಎಸಿಎಫ್ ಸುರೇಶ್ ನೇತೃತ್ವದಲ್ಲಿ ಸುಮಾರು 15ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳ ತಂಡ ‘ಪಾರ್ಥ ಸಾರಥಿ’ ಎಂಬ ಸಾಕಾನೆಯನ್ನು ಬಳಕೆ ಮಾಡಿಕೊಂಡು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದೆ.
ಗುರುವಾರ ಬೆಳಗ್ಗೆಯಿಂದ ಸಂಜೆವರೆಗೆ ವಿವಿಧ ಪ್ರದೇಶದಲ್ಲಿ ಹುಡುಕಾಟ ನಡೆಸಿದರು ಸಹ ಹುಲಿಯ ಗುರುತು ಪತ್ತೆಯಾಗಿಲ್ಲ ಎಂದು ಡಿಆರ್‍ಎಫ್‍ಓ ಶಿವಕುಮಾರ್ ತಿಳಿಸಿದರು. ಹುಲಿ ಚಲನವಲನದ ಮೇಲೆ ನಿಗಾ ವಹಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 15 ಕಡೆಗಳಲ್ಲಿ ಕ್ಯಾಮರಾ ಅಳವಡಿಕೆ ಮಾಡಿ ತೀವ್ರ ಶೋಧ ನಡೆಸುತ್ತಿದ್ದಾರೆ. ಹೀಗಿದ್ದರೂ ಹುಲಿ ಕಾಣಸಿಕಿಲ್ಲ. ಜೊತೆಗೆ ಕ್ಯಾಮರಾ ಕಣ್ಣಿಗೂ ಕೂಡ ಹುಲಿ ಬಿದ್ದಿಲ್ಲ. ಇದು ಅರಣ್ಯಾಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ರೈತರ ಅಸಮಾಧಾನ: ಹುಲಿ ಚಲನವಲನ ಹಾಗೂ ಹೆಜ್ಜೆ ಗುರುತಿನ ಮೇಲೆ ಅರಣ್ಯಾಧಿಕಾರಿಗಳು ನಿಗಾಯಿಡದೆ ರೈತರ ಒತ್ತಾಯದ ಮೇರೆಗೆ ನೆಪ ಮಾತ್ರಕ್ಕೆ ಕೂಂಬಿಂಗ್ ನಡೆಸುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಇದು ರೈತರ ಕಣ್ಣೋರೆಸುವ ತಂತ್ರವಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.
ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶಗೊಂಡ ರೈತರು, ಗ್ರಾಮಸ್ಥರು ಹುಲಿ ಸೆರೆಗಾಗಿ ಜಮೀನೊಂದರಲ್ಲಿ ಇಟ್ಟಿದ್ದ ಬೋನಿನಲ್ಲಿ ಸುಮಾರು 12ಕ್ಕೂ ಹೆಚ್ಚು ಅಧಿಕಾರಿಗಳನ್ನು ಕೂಡಿ ಹಾಕಿದ ಘಟನೆ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿತ್ತು. ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಗ್ರಾಮದಲ್ಲಿ ಕರುವೊಂದರ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿತ್ತು. ಇದರ ಮಾಹಿತಿ ನೀಡಿದ್ದರೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸಾಮೂಹಿಕ ನಾಯಕತ್ವದ ರೈತ ಸಂಘದ ಹೊನ್ನೂರು ಪ್ರಕಾಶ್ ಸೇರಿದಂತೆ ಹಲವು ಮಂದಿ ರೈತರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಅಧಿಕಾರಿಗಳನ್ನು ಕೂಡಿ ಹಾಕಿದ ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆ ಬಳಕೆ ಮಾಡಿಕೊಂಡು ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ ಹುಲಿಯ ಸುಳಿವು ಮಾತ್ರ ಸಿಗುತ್ತಿಲ್ಲ.