ಕಡೂರು: ‘ಶಕ್ತಿ’ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಸೇರಿದಂತೆ ಅಭಿವೃದ್ಧಿ ಕಾರ್ಯದಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಕಡೂರು ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಬಸ್ ನಿಲ್ದಾಣಕ್ಕೆ ಭೂಮಿಪೂಜೆ ಹಾಗೂ ಕಡೂರು ಘಟಕದ ಹಿಂಭಾಗದಲ್ಲಿ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಸತಿ ಗೃಹಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 5 ಗ್ಯಾರಂಟಿಗಳನ್ನು ಜಾರಿಗೆ ತರಲಾಯಿತು. ಎರಡೂವರೆ ವರ್ಷ ಗಳಲ್ಲಿ 554 ಕೋಟಿ ಮಹಿಳೆಯರು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರವು 14,000 ಕೋಟಿ ರೂ. ಖರ್ಚು ಮಾಡಿದೆ ಎಂದರು.
ರಾಜ್ಯದ ಎಲ್ಲಾ ಕಡೆಗಳಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ಹಿಂದಿನ ಸರ್ಕಾರ ಒಂದೇ ಒಂದು ಹೊಸ ಬಸ್ ಖರೀದಿಸಿರಲಿಲ್ಲ. ಈಗ 2000 ಹೊಸ ಬಸ್‌ಗಳನ್ನು ಖರೀದಿಸಲು ಸಂಪುಟದಲ್ಲಿ ಒಪ್ಪಿಗೆ ದೊರಕಿದೆ. ಇದರಲ್ಲಿ ಕಡೂರು ಡಿಪೋಗೂ ಹೊಸ ಬಸ್ ನೀಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಎಸ್. ಆನಂದ್, ಕಡೂರಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಮಾದರಿ ಬಸ್ ನಿಲ್ದಾಣ ನಿಗದಿತ ಸಮಯಕ್ಕೆ ಮುಗಿಯಲಿದೆ ಎಂದರು.
ಸುಮಾರು 150 ಲಕ್ಷ ರೂ. ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾರ್ಯ ಮುಗಿದಿದೆ. ಬೆಳಗಾವಿ, ಹುಬ್ಬಳ್ಳಿ, ರಾಯಚೂರು, ಗದಗ ಮುಂತಾದ ಕಡೆಗಳಿಂದ ಧರ್ಮಸ್ಥಳಕ್ಕೆ ಪ್ರಯಾಣಿಸಲು ರೈಲಿನಲ್ಲಿ ಕಡೂರಿಗೆ ಸಾವಿರಾರು ಜನ ಬಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಕಡೂರು ಬಸ್ ನಿಲ್ದಾಣ ಕೇಂದ್ರ ಸ್ಥಾನವಾಗಿದೆ. ಬೀರೂರು ಬಸ್ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಮೂರು ಕೋಟಿ ರೂ. ಮಂಜೂರಾಗಿದ್ದು ಕಾಮಗಾರಿ ಪ್ರಾರಂಭವಾಗಲಿದೆ ಎಂದರು.