SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಅರಣ್ಯಾಧಿಕಾರಿ ನಿವಾಸ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

ಅರಣ್ಯಾಧಿಕಾರಿ ನಿವಾಸ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ

0
74

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕಾರ್ಯಾಚರಣೆ; ಎಸಿಎಫ್ ನಿವಾಸ ಸೇರಿ ಹಲವು ಕಡೆ ಶೋಧ

ಚಿಕ್ಕಮಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ಅಸಿಸ್ಟೆಂಟ್ ಕನ್ಸರ್ವೇಟರ್ ಆಫ್ ಫಾರೆಸ್ಟ್ (ಎಸಿಎಫ್) ಆಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಅವರಿಗೆ ಸೇರಿದ ಮನೆ ಮತ್ತು ಇತರ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ಈ ಕಾರ್ಯಾಚರಣೆ ಚಿಕ್ಕಮಗಳೂರು ನಗರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದಿದ್ದು, ಅಧಿಕಾರಿಯ ಆಸ್ತಿ, ಹಣಕಾಸು ವ್ಯವಹಾರಗಳು ಹಾಗೂ ಆಸ್ತಿ ಸಂಪಾದನೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನಿವೃತ್ತಿಯ ಬೆನ್ನಲ್ಲೇ ಲೋಕಾಯುಕ್ತ ಶಾಕ್: ಮಾಜಿ ಕಚೇರಿ ಅಧೀಕ್ಷಕ ಮನೆ ಸೇರಿ 5 ಕಡೆ ದಾಳಿ

ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮೋಹನ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಿನ ಜಾವವೇ ದಾಳಿ ನಡೆಸಿ ಶೋಧ ಕಾರ್ಯ ಆರಂಭಿಸಿತು. ಇದೇ ವೇಳೆ ಕಡೂರು ಪಟ್ಟಣದಲ್ಲಿರುವ ಅವರ ಸಹೋದರಿಯ ನಿವಾಸದಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದು, ಮಹತ್ವದ ದಾಖಲೆಗಳು, ಬ್ಯಾಂಕ್ ವ್ಯವಹಾರಗಳ ಮಾಹಿತಿ, ಭೂಮಿ ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯನಗರದಲ್ಲಿ ಲೋಕಾಯುಕ್ತ ದಾಳಿ

ಮೋಹನ್ ಅವರ ವಿರುದ್ಧ ಅಧಿಕಾರ ದುರುಪಯೋಗಪಡಿಸಿಕೊಂಡು ಕಾನೂನುಬಾಹಿರವಾಗಿ ಆಸ್ತಿ ಸಂಪಾದನೆ ಮಾಡಿರುವ ಕುರಿತು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರು ತನಿಖೆ ಆರಂಭಿಸಿದ್ದರು. ಪ್ರಾಥಮಿಕ ಮಾಹಿತಿ ಮತ್ತು ದಾಖಲೆಗಳ ಆಧಾರದ ಮೇಲೆ ನ್ಯಾಯಾಲಯದಿಂದ ಅನುಮತಿ ಪಡೆದು ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದಾಳಿಯ ವೇಳೆ ವಶಪಡಿಸಿಕೊಂಡ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರಗಳು, ಸ್ಥಿರ ಮತ್ತು ಚರಾಸ್ತಿಗಳ ಮಾಹಿತಿ ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕವೇ ಪತ್ತೆಯಾದ ಆಸ್ತಿಗಳ ಮೌಲ್ಯ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಲೋಕಾಯುಕ್ತ ಅಧಿಕಾರಿಗಳ ಈ ದಿಢೀರ್ ಕಾರ್ಯಾಚರಣೆ ಅರಣ್ಯ ಇಲಾಖೆಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯ ಫಲಿತಾಂಶದತ್ತ ಸಾರ್ವಜನಿಕರು ಕುತೂಹಲದಿಂದ ಗಮನ ಹರಿಸಿದ್ದಾರೆ.