Home ನಮ್ಮ ಜಿಲ್ಲೆ ಚಿಕ್ಕಮಗಳೂರು ಕರ್ನಾಟಕದಲ್ಲಿ ವಿದ್ಯುತ್ ಅಭಾವವಿಲ್ಲ, ಬೇಡಿಕೆಗೆ ತಕ್ಕಂತೆ ಪೂರೈಕೆ: ಕೆ.ಜೆ. ಜಾರ್ಜ್

ಕರ್ನಾಟಕದಲ್ಲಿ ವಿದ್ಯುತ್ ಅಭಾವವಿಲ್ಲ, ಬೇಡಿಕೆಗೆ ತಕ್ಕಂತೆ ಪೂರೈಕೆ: ಕೆ.ಜೆ. ಜಾರ್ಜ್

0

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲಾಗುತ್ತಿದೆ. ಸಬ್ ಸ್ಟೇಷನ್‌ಗಳಲ್ಲಿ ಅಥವಾ ಲೈನ್‌ಗಳಲ್ಲಿ ಸಮಸ್ಯೆ ಇರುವೆಡೆ ಮಾತ್ರ ವಿದ್ಯುತ್ ವ್ಯತ್ಯಯವಾಗುತ್ತಿರಬಹುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ವ್ಯತ್ಯಯ ತಡೆಗಟ್ಟಲು ಪ್ರತಿವರ್ಷ ರಾಜ್ಯದಲ್ಲಿ 100 ಹೊಸ ಸಬ್ ಸ್ಟೇಷನ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಸ್ಥಳೀಯರ ಮನವೊಲಿಸಿ, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ ಕೇವಲ 120 ಎಕರೆ ಜಮೀನು ಸಾಕು. ಖಾಸಗಿಯವರ 50 ಎಕರೆ ಜಮೀನು, ಉಳಿದಂತೆ ಕಂದಾಯ ಹಾಗೂ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಬೇರೆಡೆ ಜಮೀನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಯೋಜನೆಯಿಂದ ದೊಡ್ಡಮಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್‌ಲೈನ್ ಮೂಲಕ ನೀರನ್ನು ಮೇಲಕ್ಕೆತ್ತಲಾಗುತ್ತದೆ. ಈ ಪೈಪ್‌ಲೈನ್‌ಗಳು ನೆಲದ ಒಳಗೆ ಇರುವುದರಿಂದ ನೆಲದ ಮೇಲೆ ಹಸಿರು ಬೆಳೆಯಲಿದೆ. ಈ ಯೋಜನೆ ಅನುಷ್ಠಾನವಾದಲ್ಲಿ ಕಡಿಮೆ ಖರ್ಚಿನಲ್ಲಿ 2 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದಿಸಬಹುದಾಗಿದೆ ಎಂದು ವಿವರಿಸಿದರು.

ವಿದ್ಯುತ್ ಲೈನ್‌ನಿಂದ 500 ಮೀಟರ್‌ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್ ಬಿ ಯೋಜನೆಯಡಿ ಸೌರವಿದ್ಯುತ್ ಕಲ್ಪಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಶೇ. 20ರಷ್ಟು ಹಣವನ್ನು ಮಾತ್ರ ಫಲಾನುಭವಿ ಭರಿಸಬೇಕು ಎಂದು ಹೇಳಿದರು.

ಕುಸುಮ್ ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅನುಷ್ಠಾನವಾದಲ್ಲಿ 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ ಎಂದು ಹೇಳಿದರು.

NO COMMENTS

LEAVE A REPLY

Please enter your comment!
Please enter your name here

Exit mobile version