SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಮುಜಾಹಿದ್ ಹಾಡು: ಏಳು ಜನ ಪೊಲೀಸ್ ವಶಕ್ಕೆ

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಮುಜಾಹಿದ್ ಹಾಡು: ಏಳು ಜನ ಪೊಲೀಸ್ ವಶಕ್ಕೆ

0
28

ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನಲೆಯಲ್ಲಿ ನಗರದ ಟಿಪ್ಪು ನಗರದಲ್ಲಿ ನಿಲ್ಲಿಸಲಾಗಿರುವ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿಡಿಯೋಗೆ ಪಾಕಿಸ್ತಾನಿ ಮುಜಾಹಿದ್‌ಗೆ ಸಂಬಂಧಿಸಿದ ಹಾಡು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಐಡಿಯಿಂದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಭಾರತದ ಮಣ್ಣಿನಲ್ಲಿ ನಿಂತು ನೆರೆಯ ಶತ್ರು ರಾಷ್ಟ್ರ ಪಾಕಿಸ್ತಾನದ ಸೇನೆ ಮತ್ತು ಮುಜಾಹಿದ್‌ಗಳನ್ನು ಹಾಡಿಹೊಗಳುವ ಇಂತಹ ದೇಶ ವಿರೋಧಿ ಮನಸ್ಥಿತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ವಿಡಿಯೋಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಧನರಾಜ್ ಅವರು ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಕೋಮು ಸೌಹಾರ್ದತೆಗೆ ಭಂಗ ತರುವ, ಧಾರ್ಮಿಕ ನಂಬಿಕೆಗಳಿಗೆ ಅಪಮಾನವೆಸಗುವ ಹಾಗೂ ಸಮಾಜದಲ್ಲಿ ಉದ್ದೇಶ ಪೂರ್ವಕವಾಗಿ ದ್ವೇಷಭಾವನೆ ಹರಡುವ ಹುನ್ನಾರ ನಡೆಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪಿಎಸ್‌ಐ ಧನರಾಜ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

7 ಜನ ಪೊಲೀಸರ ವಶಕ್ಕೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಏಳು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾರು ವಿಡಿಯೋ ಮಾಡಿದ್ದಾರೆ, ಯಾರು ಹಾಡು ಹಾಕುವಂತೆ ಸೂಚಿಸಿದ್ದಾರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಯಾರು ಹರಿಬಿಟ್ಟಿದ್ದಾರೆ ಹಾಗೂ ಇದರ ಹಿಂದಿನ ಉದ್ದೇಶವೇನು ಎಂಬ ವಿವಿಧ ಆಯಾಮಗಳಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ ರೋಷನ್ (23) ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿದ್ದ ವಿಡಿಯೋವನ್ನು ರೋಷನ್ ವೈರಲ್ ಮಾಡಿದ್ದಾನೆ ಎನ್ನಲಾಗಿದ್ದು, ಬಳಿಕ ಅದನ್ನು ವಾಟ್ಸ್ಆಪ್, ಇನ್‌ಸ್ಟಾಗ್ರಾಂ ಹಾಗೂ ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಶಕ್ಕೆ ಪಡೆದಿರುವ ಏಳು ಮಂದಿಯ ವಿಚಾರಣೆಯ ಬಳಿಕ ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ವಿಡಿಯೋ ವೈರಲ್ ಮಾಡುವಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಿಟಿ ರವಿ ಆಕ್ರೋಶ: ಈ ನಡುವೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಫೇಸ್‌ಬುಕ್ ಮೂಲಕ ಪ್ರತಿಕ್ರಿಯಿಸಿ, `ಚಿಕ್ಕಮಗಳೂರಿನಲ್ಲಿ ದೇಶವಿರೋಧಿ ಪ್ರಚೋದನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿದ್ದೆಯಲ್ಲಿದೆಯೇ’ ಎಂದು ಪ್ರಶ್ನಿಸಿದ್ದು, ಈ ಪ್ರಕರಣ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಎಸೆದಿರುವ ಬಹಿರಂಗ ಸವಾಲಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.