ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡರನ್ನು ಶಾಸಕರಾಗಿ ಮರುಸ್ಥಾಪಿಸಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಮುಂದುವರೆಸಿದ್ದು, ಇದರಿಂದ ರಾಜೇಗೌಡರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.
ರಾಜೇಗೌಡರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠ, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ಮುಂದೂಡಿತು. ಅಲ್ಲಿಯವರೆಗೆ ರಾಜೇಗೌಡರನ್ನು ಶಾಸಕರಾಗಿ ಮರುಸ್ಥಾಪಿಸಿದ್ದ ಹಿಂದಿನ ಮಧ್ಯಂತರ ಆದೇಶವೇ ಮುಂದುವರಿಯಲಿದೆ ಎಂದು ನ್ಯಾಯಾಲಯ ತಿಳಿಸಿತು.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಸುಪ್ರೀಂಕೋರ್ಟ್ ಅವಕಾಶ ಕಲ್ಪಿಸಿದೆ.






















