ಚಿತ್ರದುರ್ಗ: ಆರ್ಎಸ್ಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿ ಸ್ಥಾನಮಾನ ನೀಡಿದ ವಿಚಾರದ ವಿವಾದ ತಣ್ಣಗಾಗುವ ಮುನ್ನವೇ, ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಲೀಲಾಧರ ಠಾಕೂರ್ ಅವರು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿರುವುದು ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಚಿತ್ರದುರ್ಗದಲ್ಲಿ ಶನಿವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವತಿಯಿಂದ ನಡೆದ ಪಥಸಂಚಲನದಲ್ಲಿ ಲೀಲಾಧರ ಠಾಕೂರ್ ಪಾಲ್ಗೊಂಡಿದ್ದರು. ಬರಗೇರಮ್ಮ ದೇಗುಲದಿಂದ ಆರಂಭವಾದ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನೆಹರು ನಗರದಲ್ಲಿ ಮುಕ್ತಾಯಗೊಂಡಿತು. ನೂರಾರು ಸ್ವಯಂಸೇವಕರು ಗಣವೇಷ ಧರಿಸಿ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು.
ಪಥಸಂಚಲನದ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರಮುಖ ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಲೀಲಾಧರ ಠಾಕೂರ್ ಅವರಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ ನೀಡಿತ್ತು. ಆರ್ಎಸ್ಎಸ್ ಹಿನ್ನೆಲೆಯ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರವೇ ನಿಗಮ ಮಂಡಳಿ ಸ್ಥಾನಮಾನ ನೀಡಿದೆ ಎಂಬ ವಿಚಾರ ಪಕ್ಷದೊಳಗೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು.
ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಸಂಘದವರಿಗೆ ಹುದ್ದೆ ನೀಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದರು. ಈ ನೇಮಕಾತಿ ಪಕ್ಷದೊಳಗಿನ ಭಿನ್ನಮತಕ್ಕೂ ಕಾರಣವಾಗಿತ್ತು.
ಇದೀಗ ಠಾಕೂರ್ ಅವರೇ ಆರ್ಎಸ್ಎಸ್ ಪಥಸಂಚಲನದಲ್ಲಿ ಕಾಣಿಸಿಕೊಂಡಿರುವುದು ಕಾಂಗ್ರೆಸ್ ವಲಯದಲ್ಲಿ ಮತ್ತೆ ಚರ್ಚೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆಳವಣಿಗೆ ರಾಜಕೀಯವಾಗಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.





















