ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ದೊಡ್ಡಸಿದ್ದವ್ವನಹಳ್ಳಿ ಬಳಿ ಶುಕ್ರವಾರ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಕಾರು ಚಾಲಕ ಗೋಪಿ (43), ಮತ್ತೊಂದು ಕಾರಿನ ಚಾಲಕ ಪವನ್ (23) ಮೃತಪಟ್ಟವರು. ಅಪಘಾತದಲ್ಲಿ ಮಂಜುನಾಥ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಈ ವೇಳೆ ವೇಗವಾಗಿ ಬಂದ ಲಾರಿ ಎರಡೂ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ. ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















