SK Home Ad
Home ಸುದ್ದಿ ರಾಜ್ಯ ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವ

ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವ

0
10

ಬೆಂಗಳೂರು: “ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ನಮ್ಮ ಸರ್ಕಾರ ಅಳವಡಿಸಿಕೊಳ್ಳುತ್ತಿದೆ. ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದರು.

ದೆಹಲಿಯಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದೆ. ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಕಚೇರಿಗಳಲ್ಲಿ ಅವರ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ, ಅವರ ಆಚಾರ-ವಿಚಾರಗಳಿಗೆ ಅನುಗುಣವಾಗಿ ಸರ್ಕಾರ ಮುನ್ನಡೆಯುತ್ತಿದೆ” ಎಂದು ಹೇಳಿದರು.

ಜಾತಿ ವಿಚಾರವಾಗಿ ಸಮಾಜದಲ್ಲಿ ಪರಸ್ಪರ ವೈಷಮ್ಯ ಮೂಡಿಸುವ ಕೆಲಸವನ್ನು ಕೆಲವು ಮಾಧ್ಯಮ ಹಾಗೂ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ ಸೇರಿದಂತೆ ಇಡೀ ಸಚಿವ ಸಂಪುಟ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದೆ. ಬಸವ ಸಮಿತಿಯವರೂ ಈ ಸಂಬಂಧ ನನಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಇನ್ನಷ್ಟು ಸುದೀರ್ಘ ಚರ್ಚೆ ನಡೆಸಬೇಕಿದೆ ಎಂದರು.

ಈ ವಿಚಾರವಾಗಿ ವಿವಿಧ ಪಕ್ಷಗಳ ಮುಖಂಡರೂ ತಮ್ಮೊಂದಿಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದರು.