ಕಾವೂರು: ಕಾರ್ ಹಿಟ್ ಆಂಡ್ ರನ್‌ಗೆ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೋಂದೆಲ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತನನ್ನು ಬಜ್ಪೆ ಜರಿನಗರ ನಿವಾಸಿ ಅಹ್ಮದ್ ಬಾವ ಎನ್ನುವವರ ಪುತ್ರ ಪಿಎ ಕಾಲೇಜಿನಲ್ಲಿ ಮೂರನೇ ವರ್ಷದ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಫಹದ್ ಅಹ್ಮದ್ (22) ಎಂದು ತಿಳಿದುಬಂದಿದೆ.
ಫಹದ್ ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಜ್ಪೆಯಿಂದ ತನ್ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಘಟನೆಯಿಂದ ಫಹದ್ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯಿತ್ತಲೇ ಸ್ಥಳಕ್ಕೆ ಬಂದ ಮಂಗಳೂರು ಉತ್ತರ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ ಪ್ರತ್ಯಕ್ಷದರ್ಶಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಹಿಟ್ ಆಂಡ್ ರನ್ ನಡೆಸಿ ಪರಾರಿಯಾಗಿದ್ದ ಕಾರನ್ನು ಕೇರಳದ ಕುಂಪಳದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರಕರರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.