ಮಂಗಳೂರು: ಕಾಂಗ್ರೆಸ್ ಸೇರ್ಪಡೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿ ಕಡೆಯಿಂದಲೂ ಕರೆಯುವ ನಿರೀಕ್ಷೆಯಲ್ಲಿದ್ದೇನೆ. ಬಿಜೆಪಿ ಆಹ್ವಾನ ನೀಡಿದರೆ ಅದರ ಬಗ್ಗೆಯೂ ಯೋಚಿಸಬಹುದು ಎಂದರು.
‘ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿಯೂ ಆಯ್ಕೆಯಾಗಿದ್ದೇನೆ. ಹೀಗಿರುವಾಗ ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ನನ್ನ ಮನಸ್ಸಿಗೂ ಅದು ಒಪ್ಪುವುದಿಲ್ಲ. ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಯಾವುದೇ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು.






















