ದಾವಣಗೆರೆ(ಸಾಸ್ವೆಹಳ್ಳಿ): ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ದೀಪೋತ್ಸವದ ಅಂಗವಾಗಿ ಅಳವಡಿಸಲಾಗಿದ್ದ ಈಶ್ವರನ ಭಾವಚಿತ್ರದ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.
ಗ್ರಾಮದಲ್ಲಿ ನಡೆಯುತ್ತಿದ್ದ ಕೋಟೆ ಆಂಜನೇಯ ಮತ್ತು ಕಲ್ಲೇಶ್ವರ ಸ್ವಾಮಿಯ ದೀಪೋತ್ಸವ (ಕಾರ್ತಿಕೋತ್ಸವ)ದ ಪ್ರಯುಕ್ತ ಗ್ರಾಮದ ಪ್ರವೇಶ ದ್ವಾರದ ಬಳಿ ಈಶ್ವರನ ಭಾವಚಿತ್ರದ ಫ್ಲೆಕ್ಸ್ ಅಳವಡಿಸಲಾಗಿತ್ತು. ಈ ವೇಳೆ, ಯಾರೋ ಕಿಡಿಗೇಡಿಗಳು ಈಶ್ವರನ ಭಾವಚಿತ್ರದ ಫ್ಲೆಕ್ಸ್‌ಗೆ ತಡರಾತ್ರಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.
ಘಟನೆ ತಿಳಿದ ಕೂಡಲೇ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಸಾಸ್ವೆಹಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
