SK Home Ad
Home ನಮ್ಮ ಜಿಲ್ಲೆ ದಾವಣಗೆರೆ ವಿದ್ಯುತ್ ಖಾಸಗೀಕರಣ: ಅಂತಿಮ ನಿರ್ಧಾರ ಸಚಿವ ಸಂಪುಟದಲ್ಲಿ

ವಿದ್ಯುತ್ ಖಾಸಗೀಕರಣ: ಅಂತಿಮ ನಿರ್ಧಾರ ಸಚಿವ ಸಂಪುಟದಲ್ಲಿ

0
70

ದಾವಣಗೆರೆ : ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ರಾಜ್ಯದ ಎಲ್ಲಾ ಎಸ್ಕಾಂಗಳು (ವಿದ್ಯುತ್ ಸರಬರಾಜು ಕಂಪನಿಗಳು) ಆಕ್ಷೇಪಣೆ ಸಲ್ಲಿಸಲಿವೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು 2003ರಲ್ಲಿ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ವಿದ್ಯುತ್ ವಿತರಣೆಯಲ್ಲಿ ಖಾಸಗಿ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಿತ್ತು. ಆದರೆ, ಕರ್ನಾಟಕದಲ್ಲಿ ಇದುವರೆಗೆ ವಿದ್ಯುತ್ ವಿತರಣೆಯ ಖಾಸಗೀಕರಣ ಜಾರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: SIR ಪ್ರಕ್ರಿಯೆಗೆ ನೆರವಾಗಲು ಶಾಶ್ವತ ನಿವಾಸ ಪ್ರಮಾಣಪತ್ರ: CM

ಪ್ರಸ್ತುತ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಈ ಸಂಬಂಧ ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಎಸ್ಕಾಂಗಳು ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕೆಇಆರ್‌ಸಿ ಅಂತಿಮ ಆದೇಶದ ಬಳಿಕ ನಿರ್ಧಾರ: ವಿದ್ಯುತ್ ಖಾಸಗೀಕರಣದ ಕುರಿತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ನೀಡುವ ಅಂತಿಮ ಆದೇಶದ ನಂತರ ರಾಜ್ಯ ಸರ್ಕಾರ ಈ ವಿಷಯವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಿದೆ ಎಂದು ಕೆ.ಜೆ. ಜಾರ್ಜ್ ಹೇಳಿದರು. “ಕೆಇಆರ್‌ಸಿಯ ಅಂತಿಮ ಆದೇಶ ಹೊರಬಂದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಸಿ ಮುಂದಿನ ಕ್ರಮದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮತದಾರರಲ್ಲದವರಿಗೆ ಗ್ಯಾರಂಟಿ ಏಕೆ?‌ ಸಿಎಂ ಪ್ರಶ್ನೆ

ಜಿಲ್ಲಾ ಉಸ್ತುವಾರಿ ನೇಮಕ ಶೀಘ್ರ : ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯ ತಾವು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಹೇಳಿದರು. “ಸಚಿವ ಸಂಪುಟ ವಿಸ್ತರಣೆಯಾದ ನಂತರ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಅವರು ತಿಳಿಸಿದರು.

ಪ್ರವಾಹ ಎದುರಿಸಲು ಮುನ್ನೆಚ್ಚರಿಕೆ : ರಾಜ್ಯದಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದರು. ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಂಬಂಧಿತ ಜಿಲ್ಲಾಡಳಿತಗಳು ಹಾಗೂ ಇಲಾಖೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.