SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ

ದಾವಣಗೆರೆ: ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ

0
60

ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಸಂಭವಿಸಿದ ಅನೆಸ್ತೇಶಿಯಾ ವರ್ಕ್‌ಸ್ಟೇಷನ್ ಸ್ಫೋಟದ ಘಟನೆ ಭಾರಿ ಅನಾಹುತಕ್ಕೆ ಕಾರಣವಾಗುವ ಸಾಧ್ಯತೆ ಇದ್ದರೂ, ಆಸ್ಪತ್ರೆ ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ದೊಡ್ಡ ದುರಂತ ತಪ್ಪಿದ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಆಸ್ಪತ್ರೆಯ ಆಪರೇಷನ್ ಥಿಯೇಟರ್–5 ಮತ್ತು 6ರ ಕಣ್ಣಿನ ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ರೋಗಿಯೊಬ್ಬರ ಕಣ್ಣಿನ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಸಲಾಗುತ್ತಿತ್ತು. ಇದೇ ವೇಳೆ ಅಲ್ಲಿ ಅಳವಡಿಸಲಾಗಿದ್ದ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ನಂತರ ಬೆಂಕಿ ಹೊತ್ತಿಕೊಂಡಿದೆ.

ಘಟನೆ ಸಂಭವಿಸಿದ ಸಂದರ್ಭದಲ್ಲಿ ಆಪರೇಷನ್ ಥಿಯೇಟರ್‌ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿ 10ಕ್ಕೂ ಹೆಚ್ಚು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಫೋಟದ ಶಬ್ದ ಕೇಳುತ್ತಿದ್ದಂತೆಯೇ ಸಿಬ್ಬಂದಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇದರಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಫೋಟದ ತೀವ್ರತೆಗೆ ಅನೆಸ್ತೇಶಿಯಾ ಯಂತ್ರ ಸೇರಿದಂತೆ ಆಪರೇಷನ್ ಥಿಯೇಟರ್‌ನಲ್ಲಿದ್ದ ಹಲವು ವೈದ್ಯಕೀಯ ಉಪಕರಣಗಳು ಬೆಂಕಿಗೆ ಆಹುತಿಯಾಗಿ ಹಾನಿಗೊಳಗಾಗಿವೆ. ಘಟನೆಯಿಂದ ಕೆಲಕಾಲ ಆಸ್ಪತ್ರೆ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ಅಗ್ನಿ ಅವಘಡವನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಬೆಂಕಿ ಇತರೆ ವಿಭಾಗಗಳಿಗೆ ವ್ಯಾಪಿಸುವುದನ್ನು ತಡೆಯಲಾಗಿದೆ.

ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿತ್ತೇ ಅಥವಾ ಇತರ ಕಾರಣಗಳಿಂದ ಘಟನೆ ಸಂಭವಿಸಿತೇ ಎಂಬ ಕುರಿತು ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತಿದೆ. ಆಸ್ಪತ್ರೆ ಆಡಳಿತವು ಘಟನೆ ಕುರಿತು ತನಿಖೆ ಆರಂಭಿಸಿದ್ದು, ಹಾನಿಯ ಪ್ರಮಾಣ ಹಾಗೂ ಘಟನೆಯ ನಿಖರ ಕಾರಣಗಳ ಕುರಿತು ಅಧಿಕೃತ ವರದಿ ನಿರೀಕ್ಷಿಸಲಾಗಿದೆ.

ಘಟನೆ ಬಳಿಕ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ಗಳ ಸುರಕ್ಷತಾ ವ್ಯವಸ್ಥೆ ಹಾಗೂ ವೈದ್ಯಕೀಯ ಉಪಕರಣಗಳ ನಿರ್ವಹಣಾ ಕ್ರಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.