SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದೇವಸ್ಥಾನ ಪ್ರವೇಶ: ಯುವಕರ ಮೇಲೆ ಹಲ್ಲೆ, 42 ಮಂದಿ ವಿರುದ್ಧ ಕೇಸ್

ದೇವಸ್ಥಾನ ಪ್ರವೇಶ: ಯುವಕರ ಮೇಲೆ ಹಲ್ಲೆ, 42 ಮಂದಿ ವಿರುದ್ಧ ಕೇಸ್

0
47

ಚನ್ನಗಿರಿ (ದಾವಣಗೆರೆ) : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಿಸಿದ ವಿಚಾರವಾಗಿ ಐವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪ ಕೇಳಿಬಂದಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಐವರು ಯುವಕರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 42 ಮಂದಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಾಹಿತಿಯ ಪ್ರಕಾರ, ಗ್ರಾಮದಲ್ಲಿ ಅಜ್ಜಿಹಬ್ಬದ ಅಂಗವಾಗಿ ದಲಿತ ಸಮುದಾಯದವರು ಸಂಪ್ರದಾಯದಂತೆ ಎಡೆ ಹಾಗೂ ‘ಅಮ್ಮ (ಕೇಲು)’ ಪೂಜೆ ನೆರವೇರಿಸಿ ಗ್ರಾಮದ ಗಡಿಭಾಗದತ್ತ ಮೆರವಣಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ದೊಡ್ಡಯ್ಯಸ್ವಾಮಿ ದೇವಸ್ಥಾನದ ಸಮೀಪ ಬಂದಾಗ, ಕೆಲವರು ದೇವಸ್ಥಾನದ ಬಳಿ ಬರಬಾರದು ಎಂದು ತಡೆದು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಐವರು ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್, ಉಪವಿಭಾಗಾಧಿಕಾರಿ ಡಾ. ಚನ್ನಪ್ಪ, ತಹಸೀಲ್ದಾರ್ ಎನ್.ಜೆ. ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಸಮ್ಮುಖದಲ್ಲೇ ದಲಿತ ಸಮುದಾಯದವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ದೇವರ ದರ್ಶನ ಮಾಡಿಸಲಾಯಿತು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾತನಾಡಿ, “ಕಾನೂನಿನ ಮುಂದೆ ಎಲ್ಲರೂ ಸಮಾನರು. ಜಾತಿ ಆಧಾರಿತ ತಾರತಮ್ಯ ಅಥವಾ ಸಾರ್ವಜನಿಕ ಸ್ಥಳಗಳು, ಹೋಟೆಲ್‌ಗಳು, ಕಟಿಂಗ್ ಶಾಪ್‌ಗಳು ಹಾಗೂ ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು. ಗ್ರಾಮದ ರುದ್ರಭೂಮಿಯ ಜಾಗ ಅತಿಕ್ರಮಣಗೊಂಡಿರುವ ಬಗ್ಗೆ ಮಾಹಿತಿ ಪಡೆದ ಅವರು, ತಕ್ಷಣವೇ ಅತಿಕ್ರಮಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಮಾತನಾಡಿ, ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಎಲ್ಲ ಆಯಾಮಗಳ ಬಗ್ಗೆ ತನಿಖೆ ಮುಂದುವರಿದಿದೆ.

ಉಪವಿಭಾಗಾಧಿಕಾರಿ ಡಾ. ಚನ್ನಪ್ಪ ಮಾತನಾಡಿ, ಸಂವಿಧಾನದ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ ದೇವಸ್ಥಾನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸುವ ಹಕ್ಕು ಇದೆ ಎಂದು ಹೇಳಿದರು. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡ ಗ್ರಾಮದಲ್ಲಿ ಇಂತಹ ಜಾತಿ ಆಧಾರಿತ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಈ ಘಟನೆ ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಸಾಮಾಜಿಕ ಸಾಮರಸ್ಯದ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಆಡಳಿತವು ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಎರಡೂ ಸಮುದಾಯಗಳಿಗೆ ಮನವಿ ಮಾಡಿದೆ.