ದಾವಣಗೆರೆ: ಡಿಜಿಟಲ್ ಬಂಧನ ಹೆಸರಿನಲ್ಲಿ ವಂಚನೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ 16 ಬ್ಯಾಂಕ್ ಖಾತೆಗಳ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಇವರು ಭಾಗಿಯಾಗಿರುವುದು ತಿಳಿದುಬಂದಿದೆ.
ಮಾರ್ಚ್ 12ರಂದು ವ್ಯಕ್ತಿಯೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡು, ಆರೋಪಿಗಳಾದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ 35 ವರ್ಷದ ಅರುಣ್ ಕುಮಾರ್ ಮತ್ತು 38 ವರ್ಷದ ಮಧುಕುಮಾರ್ ಅವರನ್ನು ದಸ್ತಗಿರಿ ಮಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಅಶ್ರಫ್‌ನ ಬಂಧನಕ್ಕಾಗಿ ಬಲೆ ಬೀಸಲಾಗಿದ್ದು, ತನಿಖೆ ಮುಂದುವರೆದಿದೆ.