ದಾವಣಗೆರೆ: ರಾಜ್ಯದ ಹೃದಯಭಾಗದಲ್ಲಿರುವ ಹಾಗೂ ರಾಜಧಾನಿಯಿಂದ ವಂಚಿತವಾಗಿರುವ ದಾವಣಗೆರೆಯಲ್ಲೇ ಮುಂಬರುವ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಚ್ಚ ಕನ್ನಡ ಮಾತನಾಡುವ ಜಿಲ್ಲೆಗಳಲ್ಲಿ ದಾವಣಗೆರೆಯೂ ಪ್ರಮುಖವಾಗಿದೆ. ಇಲ್ಲಿನ ಜನರಿಗೆ ಕನ್ನಡವೇ ಮುಖ್ಯ ಭಾಷೆಯಾಗಿದೆ. ಇಂತಹ ಕನ್ನಡದ ನೆಲದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂಬ ಕಳಕಳಿ ಇದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಸೇರಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಸಮ್ಮೇಳನವನ್ನು ದಾವಣಗೆರೆಯಲ್ಲಿ ನಡೆಸಲು ಪ್ರಯತ್ನಿಸಲಾಗುವುದು ಎಂದರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ರಾಜ್ಯದಲ್ಲಿ ಕನ್ನಡವೇ ಪ್ರಥಮ ಭಾಷೆಯಾಗಿದ್ದು, ಸರ್ಕಾರಿ ನೌಕರರು ತಮ್ಮ ಆಡಳಿತಾತ್ಮಕ ಆದೇಶಗಳು, ಕಡತಗಳ ಟಿಪ್ಪಣಿಗಳು ಹಾಗೂ ಇತರ ವ್ಯವಹಾರಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ನಿರ್ವಹಿಸಬೇಕು. ಆಗ ಮಾತ್ರ ಕನ್ನಡಾಂಬೆಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಮನವಿ ಮಾಡಿದರು.
ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಈಗಾಗಲೇ ಚರ್ಚೆ ನಡೆಸಿದ್ದಾರೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ. ನೌಕರರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಸಮರ್ಥ್ ಶಾಮನೂರು ಮಾತನಾಡಿ, ಹಳೆಯ ಪಿಂಚಣಿ ಯೋಜನೆ ಜಾರಿ ಕುರಿತು ಮುಖ್ಯಮಂತ್ರಿಗಳು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರೊಂದಿಗೆ ಚರ್ಚಿಸಿದ್ದು, ಮುಂದಿನ ಐದು-ಆರು ತಿಂಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ವಿವಿಧ ಇಲಾಖೆಗಳಲ್ಲಿ ಶೇ. 70ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನೌಕರರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿದೆ. 72 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಘೋಷಿಸಿರುವುದು ಸ್ವಾಗತಾರ್ಹ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಪಂ ಸಿಇಒ ಸಾಹಿತ್ಯ ಆಲದಕಟ್ಟೆ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ವೀರೇಶ್ ಎಸ್.ಒಡೇನಪುರ, ಸಿ.ಪರಶುರಾಮಪ್ಪ, ತಿಪ್ಪೇಸ್ವಾಮಿ, ಓಬಳಪ್ಪ ಜಿ., ಶ್ರೀನಿವಾಸ ರಾಯರೆಡ್ಡಿ, ಬಿ.ಶಿವಣ್ಣ, ಗೋವಿಂದಪ್ಪ ಎಚ್.ಆರ್., ಲೋಕೇಶ್ ಇ., ಮಂಜುನಾಥ ಎಚ್.ಎಸ್. ಸೇರಿದಂತೆ ಒಟ್ಟು 10 ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.





















